ಕೆರೆ ಉಳಿಸಲು ಬೀದಿಗಿಳಿದ ಬಿಜೆಪಿ

ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳನ್ನು ಸ್ವಚ್ಛಗೊಳಿಸಿ ಸಂರಕ್ಷಣೆ ಮಾಡಬೇಕು ಎಂದು ಆಗ್ರಹಿಸಿ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕೆ.ಆರ್.ಪುರ: ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳನ್ನು ಸ್ವಚ್ಛಗೊಳಿಸಿ ಸಂರಕ್ಷಣೆ ಮಾಡಬೇಕು ಎಂದು ಆಗ್ರಹಿಸಿ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಹೊರವರ್ತುಲ ರಸ್ತೆಯ ಬೆಳ್ಳಂದೂರಿನಿಂದ ಕಾಲ್ನಡಿಗೆ ಜಾಥಾ ನಡೆಸಿ, ಇಬ್ಬಲೂರು ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟಿಸಿದರು. ಶಾಸಕ ಅರವಿಂದ ಲಿಂಬಾವಳಿ
ಮಾತನಾಡಿ, ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳಿಗೆ ನಗರದ ಬಹುತೇಕ ರಾಸಾಯನಿಕ ಮಿಶ್ರಿತ ಕೊಳಚೆ ನೀರು ಬರುತ್ತಿರುವುದರಿಂದ ಕೆರೆಗಳ ಸುತ್ತಮುತ್ತ ಪ್ರದೇಶದ ಸಾರ್ವಜನಿಕರು ಸಾಂಕ್ರಾಮಿಕ ರೋಗ ಸೇರಿದಂತೆ ನಾನಾ ರೀತಿಯ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಈ ಕೆರೆಗಳ ಪ್ರದೇಶಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಗರ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಇಲ್ಲಿಯವರೆಗೆ ಕೆರೆಗಳ ಸಂರಕ್ಷಣೆ ಬಗ್ಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಹೋರಾಟದ ಹಾದಿ ಹಿಡಿಯಲಾಗಿದೆ ಎಂದರು.
ತಡೆಗೋಡೆ ನಿರ್ಮಿಸುವ ಎಚ್ಚರಿಕೆ: ಕೆರೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಕಲುಷಿತಗೊಂಡಿರುವುದರಿಂದಜಲಮಾಲಿನ್ಯ ಉಂಟಾಗಿದೆ. ಇದನ್ನು ಸ್ವಚ್ಛಗೊಳಿಸುವವರೆಗೆ ಸ್ಥಳೀಯ ಜನರಿಗೆ ಕುಡಿಯಲು ಕಾವೇರಿ ನೀರು ಒದಗಿಸಬೇಕು. ಕೆರೆಯ ಸುತ್ತಮುತ್ತ ಪ್ರದೇಶದಲ್ಲಿ ಸರ್ಕಾರದ ವತಿಯಿಂದ ಆರೋಗ್ಯ ಶಿಬಿರ ಹಮ್ಮಿಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚುವರಿಯಾಗಿ ವೈದ್ಯರನ್ನು ನಿಯೋಜಿಸಬೇಕು. ಕೆರೆ ಸಂರಕ್ಷಣೆ ಬಗ್ಗೆ ಕೂಡಲೇ ತಾತ್ಕಾಲಿಕ ಪರಿಹಾರ ಮಾಡಬೇಕು. ಶಾಶ್ವತ ಪರಿಹಾರಕ್ಕೆ ಸೂಚಿಸಿ ತೆಗೆದುಕೊಳ್ಳುವ ಕಾಮಗಾರಿಗಳ ಬಗ್ಗೆ ಕಾಲಮಿತಿ
ಪ್ರಕಟಿಸಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳಿಗೆ ನಗರದಿಂದ ಹರಿದು ಬರುವ ನೀರಿಗೆ ತಡೆಗೋಡೆ ನಿರ್ಮಿಸಲಾಗುವುದು ಎಂದು ಎಚ್ಚರಿಸಿದರು.
ಸರ್ಕಾರಿ ವೈಫಲ್ಯ ಆರೋಪ: ಸಂಸದ ಪಿ.ಸಿ.ಮೋಹನ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳು ಈ ಕೆರೆಗಳ ಪರಿಶೀಲನೆ ಮಾಡಿದ್ದು ಕೇವಲ ಚುನಾವಣೆ ದೃಷ್ಟಿಯಿಂದ ಮಾತ್ರ. ಸರ್ಕಾರ ನಗರದ ಕೆರೆಗಳನ್ನು ಸಂರಕ್ಷಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಲ್ಲದೆ ಮಹದೇವಪುರ ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಅರೋಪಿಸಿದರು.
ಇಬ್ಬಲೂರು ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಹೊರವರ್ತುಲ ರಸ್ತೆ ಹಾಗೂ ಸರ್ಜಾಪುರ ರಸ್ತೆಯಲ್ಲಿ ಸ್ವಲ್ಪ ಸಮಯ ಸಂಚಾರ ಅಸ್ತವ್ಯಸ್ತವಾಗಿತ್ತು. ಪ್ರತಿಭಟನಾಕಾರರನ್ನು ಎಚ್‍ಎಸ್‍ಆರ್ ಲೇಔಟ್ ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು. ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ,  ವೆಂಕಟಸ್ವಾಮಿರೆಡ್ಡಿ, ಜಯಚಂದ್ರರೆಡ್ಡಿ, ಪಾಲಿಕೆ ಸದಸ್ಯರಾದ ಶ್ವೇತಾ ವಿಜಯ್ ಕುಮಾರ್, ಪುಷ್ಪ ಮಂಜುನಾಥ್, ಮುನಿಸ್ವಾಮಿ ಪಾಲ್ಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com