
ಬೆಂಗಳೂರು: ಬಿಬಿಎಂಪಿ ಮೇಯರ್ ಸ್ಥಾನಕ್ಕೆ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಖಾಸಗಿ ಮಾಧ್ಯಮಗಳ ವರದಿ ಪ್ರಕಾರ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿರುವ ಕಾಗೋಡು ತಿಮ್ಮಪ್ಪ, " ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದೆ. ಹೀಗಿದ್ದರೂ ಜನಾದೇಶದ ಹೊರತಾಗಿ ಬಿಬಿಎಂಪಿ ಮೇಯರ್ ಸ್ಥಾನಕ್ಕೆ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆ ಕಾಂಗ್ರೆಸ್ ಗೆ ಇರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜಕೀಯ ಲಾಭಕ್ಕಾಗಿ ದೇವೇಗೌಡರು ಕಾಂಗ್ರೆಸ್ ನೊಂದಿಗೆ ಮೈತ್ರಿಗೆ ಮುಂದಾಗಿದ್ದಾರೆ. ಜೆಡಿಎಸ್ ನೊಂದಿಗಿನ ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಾಗಲಿದೆ ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ಇಷ್ಟು ದಿನ ದೇವೇಗೌಡರನ್ನು ಬಯ್ಯುತ್ತಿದ್ದವರೇ ಈಗ ದೇವೇಗೌಡರ ಕಾಲು ಹಿಡಿಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಾಗೋಡು ತಿಮ್ಮಪ್ಪ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ದೇವೇಗೌಡರು ಹಾಗೂ ಜೆಡಿಎಸ್ ಗೆ ರಾಜಕೀಯ ಲಾಭವಾಗುತ್ತದೆ. ಬಿಬಿಎಂಪಿ ಮೇಯರ್ ಸ್ಥಾನಕ್ಕೆ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸೂಕ್ತವಲ್ಲ ಎಂದಿದ್ದಾರೆ.
ಸ್ಪೀಕರ್ ಕಾಗೋಡು ತಿಮ್ಮಪ್ಪ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಇದೇ ಮೊದಲೇನಲ್ಲ, ಈ ಹಿಂದೆಯೂ ಅನೇಕ ಬಾರಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಅನೇಕ ಉದಾಹರಣೆಗಳಿವೆ.
Advertisement