ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಯನ್ನು ಸರ್ಕಾರ ರದ್ದು ಮಾಡುವಂತೆ ಸೂಚಸಿಬೇಕು ಎಂದು ಬಿಜೆಪಿ ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಕೆಎಸ್ ಈಶ್ವರಪ್ಪ, ನೇತೃತ್ವದಲ್ಲಿ ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ಅವರನ್ನು ಭೇಟಿ ಮಾಡಿ ಸರ್ಕಾರ ಎಸಿಬಿ ರಚನೆಯಿಂದ ಹಿಂದೆ ಸರಿಯುವಂತೆ ಸೂಚಿಸಿ ಎಂದು ಕೋರಿದ್ದಾರೆ.
ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸುವ ಉದ್ದೇಶದಿಂದ ಸರ್ಕಾರ ಎಸಿಬಿಯನ್ನು ರಚನೆ ಮಾಡಿದೆ. ಲೋಕಾಯುಕ್ತದಲ್ಲಿ ಉಳಿದಿರುವ ಪ್ರಕರಣಗಳನ್ನು ತಮ್ಮ ಅಧೀನಕ್ಕೆ ತೆಗೆದುಕೊಂಡು, ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸುವ ಉದ್ದೇಶದಿಂದ ಎಸಿಬಿಯನ್ನು ರಚಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಎಸಿಬಿ ಸರ್ಕಾರದ ನಿಯಂತ್ರಣದಲ್ಲಿರುತ್ತದೆ. ಹಾಗಾಗಿ, ಸರ್ಕಾರದ ಭ್ರಷ್ಟಾ ಅಧಿಕಾರಿಗಳು ತಪ್ಪಿಸಿಕೊಳ್ಳುತ್ತಾರೆ. ಈ ಹಿನ್ನಲೆಯಲ್ಲಿ ಸರ್ಕಾರ ಎಸಿಬಿ ರಚನೆಯನ್ನು ಹಿಂಪಡೆಯಬೇಕು ಹಾಗೂ ಭ್ರಷ್ಟಾಚಾರ ನಿಯಂತ್ರಿಸಲು ಕರ್ನಾಟಕ ಲೋಕಾಯುಕ್ತಕ ಕಾಯ್ದೆಗೆ ಅಗತ್ಯ ತಿದ್ದುಪಡಿ ತರುವಂತೆಯೂ ಸರ್ಕಾರಕ್ಕೆ ಸೂಚಿಸಬೇಕು ಎಂದು ಬಿಜೆಪಿ ಮನವಿ ಮಾಡಿದೆ.