ಪ್ರಣಾಳಿಕೆ ಬಿಡುಗಡೆ ಮಾಡುತ್ತಿರುವ ಸಿದ್ದರಾಮಯ್ಯ ಹಾಗೂ ಪರಮೇಶ್ವರ
ರಾಜಕೀಯ
ಜಿಪಂ/ತಾಪಂ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಸ್ವಚ್ಚ ಗ್ರಾಮ ಹಾಗೂ ದಕ್ಷ ಆಡಳಿತ ಎಂಬ ಭರವಸೆಯೊಂದಿಗೆ...
ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಸ್ವಚ್ಚ ಗ್ರಾಮ ಹಾಗೂ ದಕ್ಷ ಆಡಳಿತ ಎಂಬ ಭರವಸೆಯೊಂದಿಗೆ ಚುನಾವಣೆ ಪ್ರಣಾಳಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಎಲ್ಲಾ ಭರವಸೆಗಳನ್ನು ಎರಡರಿಂದ ಮೂರು ವರ್ಷಗಳಲ್ಲಿ ಈಡೇರಿಸುವ ವಾಗ್ದಾನ ಮಾಡಿದರು.
ಈ ವೇಳೆ ಮಾತನಾಡಿದ ಸಿಎಂ, ರಾಜ್ಯದ 29 ಸಾವಿರ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು 45 ಸಾವಿರ ಕೋಟಿ ರೂ. ಗಳ ಅಗತ್ಯವಿದ್ದು, ಮುಂದಿನ ಮೂರು ವರ್ಷಗಳಲ್ಲಿ ಹತ್ತು ಸಾವಿರ ಕೋಟಿ ರೂ. ಗಳನ್ನು ಮೀಸಲಿಡುವುದಾಗಿ ಭರವಸೆ ನೀಡಿದರು.
ಪ್ರತಿ ಹಳ್ಳಿಗಳಿಗೂ ಸಾರಿಗೆ ವ್ಯವಸ್ಥೆ ಕಲ್ಪಿಸಿ, ಶುದ್ಧ ಕುಡಿಯುವ ನೀರು ಪೂರೈಕೆ, ಮನೆಗೊಂದು ಶೌಚಾಲಯ ನಿರ್ಮಾಣ, ಸೂರಿಲ್ಲದ ಜನರಿಗೆ ವಸತಿ, ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ಸೇರಿದಂತೆ, ಗ್ರಾಮೀಣಾಭಿವೃದ್ಧಿಗೆ ಪೂರಕವಾದ ಹತ್ತುಹಲವು ಭರವಸೆಗಳನ್ನು ನೀಡುವ ಮೂಲಕ ಗ್ರಾಮೀಣ ಜನರ ಮನ ಗೆಲ್ಲಲು ಕಾಂಗ್ರೆಸ್ ಮುಂದಾಗಿದೆ.
ಮಹಿಳಾ ಮತದಾರರ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಪಕ್ಷ ಸ್ತ್ರೀಶಕ್ತಿ ಸಂಘಗಳಿಗೆ `ಸಂಘ ಸೌಭಾಗ್ಯ’ ಯೋಜನೆಯಡಿ ವಾರ್ಷಿಕ 25 ಸಾವಿರ ರೂ. ಗಳ ಅನುದಾನ, ಪ್ರತಿ ತಾಲ್ಲೂಕಿನಲ್ಲಿ ಸ್ತ್ರೀಶಕ್ತಿ ಭವನ ನಿರ್ಮಾಣಕ್ಕೆ ಒಂದು ಕೋಟಿ ರೂ. ಅನುದಾನ, ಎಲ್ಲಾ ತಾಲ್ಲೂಕುಗಳಲ್ಲಿ ಮಹಿಳಾ ಸಹಕಾರಿ ಬ್ಯಾಂಕ್‌ಗಳ ಸ್ಥಾಪನೆ, ಗ್ರಾಮೀಣ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕ್ಷೀರಭಾಗ್ಯ, ವಿದ್ಯಾ ವಿಮಾ ಯೋಜನೆ, ವಿದ್ಯಾ ಸಾರಿಗೆ ಸೇರಿದಂತೆ, ಸಪ್ತ ಸೌಲಭ್ಯಗಳ ಪೂರೈಕೆ ಮಾಡುವುದು ಸೇರಿದಂತೆ, ಹಲವು ಭರವಸೆಗಳನ್ನು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ