ಶಿವಮೊಗ್ಗ: ನ್ಯಾಯಾಂಗ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಹೀಗಾಗಿ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಆಗ್ರಹಿಸಿದ್ದಾರೆ.
ಗಣಪತಿ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಬಿಎಸ್ ವೈ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಜನರೇ ಪಾಠ ಕಲಿಸುತ್ತಾರೆ ಎಂದರು.
ಪ್ರಕರಣವನ್ನು ಕೂಡಲೇ ಸಿಬಿಐಗೆ ವಹಿಸಬೇಕು ಮತ್ತು ಸಚಿವ ಕೆ.ಜೆ.ಜಾರ್ಜ್ ಅವರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮುಂದುವರೆಸಲಿದೆ ಎಂದರು.
ಜಾರ್ಜ್ ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವಂತೆ ನಮ್ಮ ಶಾಸಕರಿಗೆ ಸೂಚಿಸಲಾಗಿದೆ ಎಂದರು. ಅಲ್ಲದೆ ನಾಳೆ ಕೊಡಗು ಬಂದ್ ಕರೆ ನೀಡಲಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ಹೊಣೆ ಎಂದು ಬಿಎಸ್ ವೈ ಎಚ್ಚರಿಸಿದರು.