
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ರಾಜ್ಯಾಧ್ಯಕ್ಷರಾದ ನಂತರ ಇಂದು ಬಿಜೆಪಿ ಮೊದಲ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ವುಡ್‌ಲ್ಯಾಂಡ್ಸ್ ಹೋಟೆಲ್‌ನ ಗಾಜಿನ ಸಭಾಂಗಣದಲ್ಲಿ ಈ ಸಭೆ ನಡೆಯಲಿದೆ, ಪಕ್ಷದ ರಾಜ್ಯ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು, ಆಹ್ವಾನಿತರು ಸೇರಿ ಸುಮಾರು 450ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ.
ಪಕ್ಷದ ರಾಜ್ಯ ಉಸ್ತುವಾರಿ ಕೆ.ಮುರಳೀಧರರಾವ್, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಜಿ.ಎಂ.ಸಿದ್ದೇಶ್ವರ್, ಕೆ.ಎಸ್ ಈಶ್ವರಪ್ಪ ಸೇರಿದಂತೆ ಎಲ್ಲ ಪ್ರಮುಖ ನಾಯಕರೂ ಭಾಗವಹಿಸಲಿದ್ದಾರೆ
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಹಮ್ಮಿಕೊಳ್ಳುವುದು ಮತ್ತು ಕೇಂದ್ರದ ಎನ್‌ಡಿಎ ಸರ್ಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಆ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕುರಿತಂತೆ ವಿಸ್ತೃತವಾಗಿ ಚರ್ಚಿಸುವ ಸಂಬಂಧ ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂಬ ಯಡಿಯೂರಪ್ಪ ಅವರ "ಮಿಷನ್ 150+' ಗುರಿಯನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಈಗಿನಿಂದಲೇ ಪಕ್ಷದ ಸಂಘಟನೆಯನ್ನು ಹೇಗೆ ಬಲಪಡಿಸಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸುವ ಉದ್ದೇಶವನ್ನೂ ಈ ಸಭೆ ಹೊಂದಿದೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಹಮ್ಮಿಕೊಳ್ಳುವ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು. ಜತೆಗೆ ಕೇಂದ್ರ ಸರ್ಕಾರದ 2 ವರ್ಷಗಳ ಸಾಧನೆಯನ್ನು ಜನರಿಗೆ ತಲುಪಿಸುವ ಬಗ್ಗೆಯೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
Advertisement