

ಮೈಸೂರು: ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಸಂಪುಟ ಬಿಕ್ಕಟ್ಟನ್ನೇ ದಾಳವಾಗಿ ಬಳಸಿಕೊಳ್ಳಲು ಮುಂದಾಗಿರುವ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಇದೀಗ ಕಾಂಗ್ರೆಸ್ ನಿಂದ ಅತೃಪ್ತಗೊಂಡಿರುವ ಮುಖಂಡರನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ತಿಳಿದುಬಂದಿದೆ.
ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ವರಿಷ್ಟರು ಇದೀಗ ಮಾಜಿ ಸಚಿವರಾದ ವಿ.ಶ್ರೀನಿವಾಸ ಪ್ರಸಾದ್ ಹಾಗೂ ಅಂಬರೀಷ್ ಅವರಿಗೆ ಪಕ್ಷಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದಾರೆಂದು ಹೇಳಲಾಗುತ್ತಿದೆ.
ಜೆಡಿಎಸ್ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು ಈಗಾಗಲೇ ದೂರವಾಣಿ ಮುಖಾಂತರ ಶ್ರೀನಿವಾಸ ಪ್ರಸಾದ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಪ್ರಸ್ತುತ ವಿಚಾರ ಹಾಗೂ ಇನ್ನಿತರೆ ವಿಚಾರಗಳ ಬಗ್ಗೆ ಮಾತುಕತೆ ನಡೆಸಲು ಆಹ್ವಾನ ನೀಡಿದ್ದಾರೆನ್ನಲಾಗಿದೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಶ್ರೀನಿವಾಸ ಪ್ರಸಾದ್ ಅವರೊಂದಿಗೆ ದೂರವಾಣಿ ಮುಖಾಂತರ ಮಾತುಕತೆ ನಡೆಸಿದ್ದು, ಜೀವನದಲ್ಲಿ ಇದೆಲ್ಲಾ ಭಾಗವಾಗಿರುತ್ತದೆ ಎಂದು ಸಮಾಧಾನ ಹೇಳಿದ್ದಾರೆ. ಅಲ್ಲದೆ, ಶ್ರೀನಿವಾಸ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಶ್ರೀನಿವಾಸ್ ಪ್ರಸಾದ್ ಅವರಿದೆ ಮಾತುಕತೆ ನಡೆಸಿದ ಬಳಿಕ ಜೆಡಿಎಸ್ ನಾಯಕರು ಅಂಬರೀಷ್ ಅವರೊಂದಿಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸಮಾಧಾನದ ಮಾತುಗಳನ್ನಾಡಿದ್ದಾರೆಂದು ಮೂಲಗಳು ತಿಳಿಸಿವೆ.