
ಮೈಸೂರು: ನಂಜನಗೂಡು ವಿಧಾನಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಫೀನಿಕ್ಸ್ ನಂತೆ ಎದ್ದು ಬರುತ್ತೇನೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ನಂಜನಗೂಡಿನಲ್ಲಿ ನಡೆದ ಬೃಹತ್ ಸ್ವಾಭಿಮಾನ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮತ್ತು ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.
ಸಂಪುಟದಲ್ಲಿ ಪ್ರಿಯಾಂಕ ಖರ್ಗೆಗೆ ಅವಕಾಶ ಕಲ್ಪಿಸುವ ಸಲುವಾಗಿ ಮಲ್ಲಿಕಾರ್ಜುನ ಖರ್ಗೆ ಮತ್ತು ಜಿ ಪರಮೇಶ್ವರ ನನ್ನ ಬೆನ್ನಿಗೆ ಚೂರಿ ಹಾಕಿ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದ್ದಾರೆ. ನಾನು ಏನು ಎಂಬುದನ್ನು ಜನರಿಗೆ ತೋರಿಸುತ್ತೇನೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರದ್ದು ತುಘಲಕ್ ದರ್ಬಾರ್ ಎಂದು ದೂರಿದ ಪ್ರಸಾದ್, 14 ಸಚಿವರನ್ನು ಸಂಪುಟದಿಂದ ಸಿಎಂ ವಜಾಗೊಳಿಸಿದರು, ಈಗ ಸಿದ್ದರಾಮಯ್ಯ ಸಂಪುಟದಲ್ಲಿ ಕೇವಲ ನಿಷ್ಪ್ರಯೋಜಕ ಸಚಿವರನ್ನಷ್ಟೇ ಸಚಿವ ಸಂಪುಟದಲ್ಲಿ ಉಳಿಸಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಅವಕಾಶ ಸಿಕ್ಕಾಗಲೆಲ್ಲಾ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದ, ಕಾಗೋಡು ತಿಮ್ಮಪ್ಪ ಮತ್ತು ರಮೇಶ್ ಕುಮಾರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಅದೋಪಿಸಿದ್ದಾರೆ.
ಕೊರಟಗೆರೆಯಲ್ಲಿ ಸೋಲಲು ಸಿದ್ದರಾಮಯ್ಯ ಕಾರಣ ಎಂದು ಪರಮೇಶ್ವರ್ ಸಿಎಂ ವಿರುದ್ಧ ದೂರುತ್ತಿದ್ದರು. ಆದರೆ ಸಚಿವರಾದ ಮೇಲೆ ಸಿಎಂ ಜೊತೆ ಕೈಗೂಡಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಮತ್ತು ಪರಮೇಶ್ವರ್ ರದ್ದು ಭಲೇ ಜೋಡಿ, ಅವರ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣೆಗೆ ಹೋದರೆ ಕಾಂಗ್ರೆಸ್ ಮುಕ್ತ ಕರ್ನಾಟಕ ಸಿದ್ದರಾಮಯ್ಯ ಅವರ ಸಾಧನೆಯಾಗುತ್ತದೆ ಎಂದು ಲೇವಡಿ ಮಾಡಿದ್ದಾರೆ.
ವರುಣ ಮತ್ತು ಚಾಮುಂಡೇಶ್ವರಿ ಕ್ಷೇತ್ರದ ಚುನಾವಣೆಯೆಲ್ಲಾ ನಾನು ಯಾರು ಎಂಬದನ್ನು ಸಾಬೀತು ಮಾಡುತ್ತೇನೆ ಎಂದು ಶ್ರೀನಿವಾಸ್ ಪ್ರಸಾದ್ ಸವಾಲು ಹಾಕಿದ್ದಾರೆ. ನನಗೆ ಜೆಡಿಎಸ್, ಬಿಜೆಪಿ ಸೇರಿದಂತೆ ಹಲವು ಪಕ್ಷಗಳಿಂದ ತಮಗೆ ಆಹ್ವಾನ ಬಂದಿದ್ದು, ತಮ್ಮ ಬೆಂಬಲಿಗರ ಜೊತೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
Advertisement