

ಮೈಸೂರು: ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡುವ ನಿರ್ಧಾರ ಕೈಗೊಳ್ಳುತ್ತಿದ್ದಂತೆ ರಾಜ್ಯದ ರಾಜಕೀಯ ವಲಯಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯತೊಡಗಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡಾಯವೆದ್ದಿರುವ ಶ್ರೀನಿವಾಸ್ ಪ್ರಸಾದ್ ಅವರನ್ನು ಸೆಳೆಯಲು ವಿವಿಧ ಪಕ್ಷಗಳು ಕಸರತ್ತು ನಡೆಸಲು ಆರಂಭಿಸಿವೆ.
ದಸರಾ ಹಬ್ಬ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತೇನೆಂದು ಈ ಹಿಂದೆ ಶ್ರೀನಿವಾಸ್ ಪ್ರಸಾದ್ ಅವರು ಘೋಷಣೆ ಮಾಡಿದ್ದರು. ಪ್ರಸಾದ್ ಅವರು ಪಕ್ಷ ತೊರೆಯುವ ನಿರ್ಧಾರ ಕೈಗೊಳ್ಳುತ್ತಿದ್ದಂತೆ ವಿವಿಧ ಪಕ್ಷದ ನಾಯಕರು ಚುರುಕುಗೊಂಡಿದ್ದು, ಪ್ರಸಾದ್ ಅವರ ನಿವಾಸಕ್ಕೆ ತೆರಳಿ ತಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಮನವೊಲಿಸುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
ಈಗಾಗಲೇ ಹಲವಾರು ನಾಯಕರು ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ, ಮುಂದಿನ ನಿರ್ಧಾರ ಕುರಿತು ಪ್ರಸಾದ್ ಅವರು ಮಾತ್ರ ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈ ಹಿಂದೆ ಪ್ರಸಾದ್ ಅವರು ಬಹಿರಂಗವಾಗಿ ಘೋಷಣೆ ಮಾಡಿದ್ದರು. ಆದರೆ, ರಾಜಕೀಯದಲ್ಲಾದ ಕೆಲ ಬೆಳವಣಿಗೆಗಳಿಂದ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿ ರಾಜಕೀಯದಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಚಿಂತನೆ ನಡೆಸುತ್ತಿದ್ದಾರೆನ್ನಲಾಗಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಲು ನಿರ್ಧಾರಿಸಿದ್ದಾರೆನ್ನುವ ಮಾತು ಮಾತ್ರ ಬಲವಾಗಿ ಕೇಳಿಬರುತ್ತಿದೆ.