ನವದೆಹಲಿ: 20 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ಸೋಮವಾರ ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿಂದೆ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಹುಲ್ ಗಾಂಧಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಾಸಕರಾದ ರಾಜಶೇಖರ್ ಪಾಟೀಲ್, ಜಿ.ಎಸ್.ಪಾಟೀಲ್, ಎಂ.ಟಿ.ಬಿ.ನಾಗರಾಜ್. ಮಾಲೀಕಯ್ಯ ಗುತ್ತೆದಾರ್, ಶಿವಾನಂದ್ ಪಾಟೀಲ್, ರಾಜು ಅಲಗೂರು, ಬಿ.ಆರ್.ಯಾವಗಲ್ ಹಾಗೂ ರಹೀಮ್ ಖಾನ್ ಸೇರಿದಂತೆ 20 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಸಿಎಂ ಪ್ರಸ್ತಾಪಕ್ಕೆ ರಾಹುಲ್ ಗಾಂಧಿ ಸಮ್ಮತಿ ಸೂಚಿಸಿದ್ದಾರೆ.
ರಾಹುಲ್ ಗಾಂಧಿ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸಿದ್ಧಗೊಂಡಿರುವ ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಟ್ಟಿಯನ್ನು ಕಳುಹಿಸಿದ ನಂತರ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದರು.
ನಿಗಮ, ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಸಿದ್ದಪಡಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ರಾತ್ರಿ ದೆಹಲಿಗೆ ತೆರಳಿದ್ದರು. ಸೋಮವಾರ ನೇಮಕಾತಿ ಪಟ್ಟಿ ಕುರಿತು ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿದ್ದರು, ಈ ಸಂದರ್ಭದಲ್ಲಿ ಕರ್ನಾಟಕದ ಉಸ್ತುವಾರಿ ದಿಗ್ವಿಜಯ್ ಸಿಂಗ್ ಕೂಡಾ ಜೊತೆಗಿದ್ದರು.