ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಜನರು ಹುಡುಕುವ ಪರಿಸ್ಥಿತಿ ಉಂಟಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಜೆಡಿಎಸ್ ಪಕ್ಷವಾಗಿ ಯಾವುದೇ ಸ್ಥಾನ ಗೆಲ್ಲಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೇಳಿದ ಬಗ್ಗೆ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ನೇತೃತ್ವದ ಬಿಬಿಎಂಪಿಗೆ ಬೆಂಬಲ ಮುಂದುವರಿಸಬೇಕೆ ಎಂಬುದರ ಬಗ್ಗೆ ಯೋಚಿಸಬೇಕಾಗಿದೆ ಎಂದರು.
ಈ ಬಗ್ಗೆ ಪಕ್ಷದ ಬಿಬಿಎಂಪಿ ಸದಸ್ಯರ ಸಭೆ ಕರೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಮೊನ್ನೆ ಸಿದ್ದರಾಮಯ್ಯನವರು ಜೆಡಿಎಸ್ ನ 7 ಬಂಡಾಯ ಶಾಸಕರೊಂದಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದರು. ಅವರು ಡಿಸೆಂಬರ್ ಅಥವಾ ಜನವರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಬಹುತೇಕವಿದೆ. ಜೆಡಿಎಸ್ ರಾಜ್ಯದಲ್ಲಿ ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಮುಖ್ಯಮಂತ್ರಿ ಟೀಕಿಸಿದ್ದರು.