ರಾಜ್ಯ ಸರ್ಕಾರದ ವೈಫಲ್ಯಗಳನ್ನು ತಿಳಿಸಲು ಬಿಜೆಪಿಯಿಂದ ನವಕರ್ನಾಟಕ ನಿರ್ಮಾಣ ರಥಯಾತ್ರೆ

ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಬಿಜೆಪಿ "ನವಕರ್ನಾಟಕ ನಿರ್ಮಾಣ ಪರಿವರ್ತನ ಯಾತ್ರೆ' ಎಂಬ ರಥಯಾತ್ರೆ ನಡೆಸಲು ಯೋಜನೆ ಹಾಕಿದೆ.
ಬಿಜೆಪಿಯಿಂದ ನವಕರ್ನಾಟಕ ನಿರ್ಮಾಣ ರಥಯಾತ್ರೆ
ಬಿಜೆಪಿಯಿಂದ ನವಕರ್ನಾಟಕ ನಿರ್ಮಾಣ ರಥಯಾತ್ರೆ
Updated on
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಬಿಜೆಪಿ "ನವಕರ್ನಾಟಕ ನಿರ್ಮಾಣ ಪರಿವರ್ತನ ಯಾತ್ರೆ' ಎಂಬ ರಥಯಾತ್ರೆ ನಡೆಸಲು ಯೋಜನೆ ಹಾಕಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಈ ರಥಯಾತ್ರೆ ತೆರಳಲಿದೆ. ನವ ಕರ್ನಾಟಕ ನಿರ್ಮಾಣಕ್ಕೆ ಬಿಜೆಪಿಯ ಸಂಕಲ್ಪಗಳೇನು, ಪ್ರಸ್ತುತ ರಾಜ್ಯದಲ್ಲಿರುವ ಕಾಂಗ್ರೆಸ್‌ ಸರಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿಗಳ ಬಗ್ಗೆ ಜನರಿಗೆ ತಿಳಿಸುವ ಉದ್ದೇಶದಿಂದ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ದೆಹಲಿಯಲ್ಲಿ ಶನಿವಾರ ನಡೆದ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಈ ಸಭೆಯ ನೇತೃತ್ವ ವಹಿಸಿದ್ದರು. 
ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್‌ ಶಾ ಅವರು ಪಕ್ಷ ಸಂಘಟನೆ ಮತ್ತು ಚುನಾವಣಾ ಸಿದ್ಧತೆಗಳ ಬಗ್ಗೆ ರಾಜ್ಯ ನಾಯಕರಿಗೆ ಹಲವು ಸೂಚನೆ ಗಳನ್ನು ನೀಡಿದ್ದು, ಇದನ್ನು ಯಾವ ರೀತಿ ಅನುಷ್ಠಾನಗೊಳಿಸಬೇಕು ಎಂಬ ಬಗ್ಗೆಯೇ ಸಭೆಯಲ್ಲಿ ಹೆಚ್ಚಿನ ಚರ್ಚೆ ನಡೆಸಲಾಯಿತು. ಪಕ್ಷ ಸಂಘಟನೆ ನಿಟ್ಟಿನಲ್ಲಿ ರಾಜ್ಯದಲ್ಲಿರುವ 57 ಸಾವಿರಕ್ಕೂ ಹೆಚ್ಚು ಬೂತ್‌ ಗಳಲ್ಲಿ 9 ಸದಸ್ಯರ ನ್ನೊಳಗೊಂಡ ಬೂತ್‌ ಸಮಿತಿಯನ್ನು ರಚಿಸಬೇಕು. ಈ ಸಮಿತಿಯಲ್ಲಿ ಅಧ್ಯಕ್ಷರು, ಕಾರ್ಯ ದರ್ಶಿ ಸಹಿತ ತಲಾ ಇಬ್ಬರು ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡದವರು, ಹಿಂದುಳಿದವರು ಇರಬೇಕು ಎಂದು  ಶಾ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 2022 ರ ವೇಳೆಗೆ ‘ನವ ಭಾರತ’ ನಿರ್ಮಿಸುವ ಸಂಕಲ್ಪ ತೊಟ್ಟಿದ್ದಾರೆ. ಅದೇ ಮಾದರಿಯಲ್ಲಿ ಪಕ್ಷವು ‘ನವ ಕರ್ನಾಟಕ’ ನಿರ್ಮಾಣದ ಸಂಕಲ್ಪ ತೊಟ್ಟಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸಭೆಯ ನಂತರ ತಿಳಿಸಿದರು.
ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್‌ 1 ರಿಂದ ಪ್ರತಿ ಜಿಲ್ಲೆಯಲ್ಲೂ ಯಾತ್ರೆ ಹಮ್ಮಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪಕ್ಷದ ರಾಜ್ಯ ಹಾಗೂ ಜಿಲ್ಲಾ ಮುಖಂಡರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್‌ ಲಾಲ್‌, ರಾಜ್ಯ ಉಸ್ತುವಾರಿ ಮುರಳೀಧರ ರಾವ್‌, ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾಬ್ಡೇಕರ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಕೋರ್‌ ಕಮಿಟಿ ಸದಸ್ಯರು ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com