

ಮೈಸೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರೊಂದಿಗೆ ಪಕ್ಷದ ಹೈಕಮಾಂಡ್ ಸಂಪರ್ಕದಲ್ಲಿದ್ದು, ರಾಜೀನಾಮೆ ಹಿಂಪಡೆಯುವ ನಿರ್ಧಾರದ ಬಗ್ಗೆ ಮರು ಚಿಂತನೆ ಮಾಡುವಂತೆ ಮನವೊಲಿಕೆಗೆ ಯತ್ನಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ನಾನು ಕೂಡ ಶೀಘ್ರವೇ ಎಸ್.ಎಂ. ಕೃಷ್ಣ ಅವರನ್ನು ಭೇಟಿ ಮಾಡಿ ಮನವೊಲಿಸಲು ಯತ್ನಿಸುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಿರಿಯ ನಾಯಕರಿಂದ ಕೂಡಿದ ಪಕ್ಷ, ಕಾಂಗ್ರೆಸ್ ಪಕ್ಷದ ಸಮನ್ವಯ ಸಮಿತಿ ಸಭೆಯಲ್ಲಿ ಎಸ್.ಎಂ.ಕೃಷ್ಣ, ಜಾಫರ್ ಷರೀಫ್ ಎಲ್ಲರೂ ಪಾಲ್ಗೊಂಡಿದ್ದರು. ಸಭೆಯಲ್ಲಿ ಹಿರಿಯರ ಸಲಹೆ, ಅಭಿಪ್ರಾಯಗಳನ್ನು ಪಡೆದುಕೊಳ್ಳಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.
ನಮ್ಮ ನಿರೀಕ್ಷೆಗೆ ತಕ್ಕಂತೆ ಯಾವುದೂ ನಡೆಯುತ್ತಿಲ್ಲ ಎಂಬ ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಖರ್ಗೆ ಅವರು ಯಾವ ಸಂದರ್ಭಕ್ಕೆ ಅನ್ವಯವಾಗುವಂತೆ ಈ ಮಾತು ಹೇಳಿದ್ದಾರೆ ಎಂಬುದರ ಬಗ್ಗೆ ನನಗೆ ಅರಿವಿಲ್ಲ ಎಂದು ತಿಳಿಸಿದರು. ಮಾರ್ಚ್ ಎರಡನೇ ವಾರದಲ್ಲಿ ರಾಜ್ ಬಜೆಟ್ ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.