
ಬೆಂಗಳೂರು: ಕಮಲ ಪಾಳ್ಯದಲ್ಲಿ ರಾಯಣ್ಣ ಬ್ರಿಗೇಡ್ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಪಕ್ಷದಲ್ಲಿ ಉಂಟಾಗಿರುವ ಕಲಹದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತಾ ಶಾ ಅವರು ಮಧ್ಯೆ ಪ್ರವೇಶ ಮಾಡುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿಯವರು ಶನಿವಾರ ಸ್ಪಷ್ಟಪಡಿಸಿದ್ದಾರೆ.
ಕಲಬುರ್ಗಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಭೆ ವೇಳೆ ಎರಡೂ ಬಣಗಳಿಂದಲೂ ಭಿನ್ನತಾ ಹೇಳಿಕೆಗಳು ಬಂದಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಯಡಿಯೂರಪ್ಪ ಅವರನ್ನಾಗಲೀ, ಕೆ.ಎಸ್. ಈಶ್ವರಪ್ಪ ಅವರನ್ನಾಗಲಿ ಭೇಟಿಯಾಗಿ ಮಾತುಕತೆ ನಡೆಸುವ ಸಂಭವಗಳಿಲ್ಲ ಎಂದು ಹೇಳಿದ್ದಾರೆ.
ಪದಾಧಿಕಾರಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳು ಬಂದರೂ ಅಂತಿಮವಾಗಿ ಪಟ್ಟಿಯನ್ನು ಅಮಿತ್ ಶಾ ಅವರೇ ಅಂತಿಮಗೊಳಿಸಲಿದ್ದಾರೆಂದು ತಿಳಿಸಿದ್ದಾರೆ. ಇದೇ ವೇಳೆ ರಾಯಣ್ಣ ಬ್ರಿಗೇಡ್ ನಲ್ಲಿ ಭಾಗಿಯಾದ ಬಿಜೆಪಿ ನಾಯಕರ ವಿರುದ್ದ ಪಕ್ಷ ಕ್ರಮಕೈಗೊಳ್ಳಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಭಾನುವಾರ ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಈಶ್ವರಪ್ಪ ಅವರೂ ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದ್ದಾರೆ.
Advertisement