ಸಕ್ರಿಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ಗುಡ್ ಬೈ

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಶನಿವಾರ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ.
ಎಸ್.ಎಂ.ಕೃಷ್ಣ
ಎಸ್.ಎಂ.ಕೃಷ್ಣ
ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ,  ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಶನಿವಾರ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ.
ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಎಸ್.ಎಂ.ಕೃಷ್ಣ ಅವರು, ತಾವು ಎಲ್ಲಾ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯುವುದಾಗಿ ತಿಳಿಸಿದ್ದಾರೆ. ಅಲ್ಲದೆ ಇನ್ನುಮುಂದೆ ಕಾಂಗ್ರೆಸ್ ಸದಸ್ಯತ್ವ ನವೀಕರಣ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ನಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿರುವ ಬಗ್ಗೆಯೂ ಎಸ್. ಎಂ.ಕೃಷ್ಣ ಪತ್ರದಲ್ಲಿ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.

84 ವರ್ಷದ ಹಿರಿಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರು ರಾಜ್ಯ ರಾಜಕಾರಣದ ಹೊರತಾಗಿಯೂ ರಾಷ್ಟ್ರ ಮಟ್ಟದಲ್ಲೂ ಮಿಂಚಿದವರು. 2004ರಿಂದ 2008ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ 2009ರಿಂದ 2012ರವರೆಗೆ ವಿದೇಶಾಂಗ ಸಚಿವರಾಗಿ ಹಾಗೂ 1999ರಿಂದ 2004ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಈ ಮಧ್ಯೆ ಸಕ್ರಿಯ ರಾಜಕಾರಣದಿಂದ ತಾವು ದೂರ ಉಳಿಯುತ್ತಿರುವ ಬಗ್ಗೆ ನಾಳೆ ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಬಗ್ಗೆ ವಿಧಾನಸೌಧದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಸ್.ಎಂ. ಕೃಷ್ಣ ರಾಜಿನಾಮೆ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದಿದ್ದಾರೆ.

ಎಸ್.ಎಂ. ಕೃಷ್ಣ ಒಬ್ಬ ಹಿರಿಯ ರಾಜಕಾರಣಿಯಾಗಿದ್ದು, ಅವರ ರಾಜಿನಾಮೆ ಬಗ್ಗೆ ನನಗೆ ಇನ್ನೂ ಮಾಹಿತಿ ಇಲ್ಲ. ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.

ಇನ್ನು ಈ ಬಗ್ಗೆ ಮೈಸೂರಿನಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಎಚ್.ವಿಶ್ವನಾಥ್ ಅವರು, ನಾನು ಎಸ್.ಎಂ.ಕೃಷ್ಣ ಅವರ ದೊಡ್ಡ ಅಭಿಮಾನಿಯಾಗಿದ್ದು, ಅವರು ಯಾವುದೇ ಕಾರಣಕ್ಕೂ ಸಕ್ರಿಯ ರಾಜಕಾರಣದಿಂದ ದೂರ ಸರಿಯಬಾರದು ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com