ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಮೈಸೂರು ಜಿಲ್ಲೆಯ ವರುಣಾ ವಿಧಾನ ಸಭಾ ಕ್ಷೇತ್ರದಲ್ಲಿ ಯತೀಂದ್ರ ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಆ ಮೂಲಕ ಮುಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅವರ ಸಕ್ರಿಯ ರಾಜಕೀಯ ಪ್ರವೇಶ ಖಚಿತಗೊಂಡಿದೆ.
ಯತೀಂದ್ರ ಎರಡು ತಿಂಗಳ ಹಿಂದೆಯೇ ಪಕ್ಷದ ಸದಸ್ಯತ್ವ ತೆಗೆದುಕೊಂಡಿದ್ದಾರೆ. ಆದರೆ, ಅವರಿಗೆ ಪಕ್ಷದಲ್ಲಿ ಯಾವುದೇ ಸ್ಥಾನ ನೀಡಿಲ್ಲ ಎಂದು ಮೈಸೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ. ವಿಜಯಕುಮಾರ್ ತಿಳಿಸಿದ್ದಾರೆ. ಈ ವಿಷಯವನ್ನು ರಾಜ್ಯ ಕಾಂಗ್ರೆಸ್ ಘಟಕ ರಹಸ್ಯವಾಗಿ ಇಟ್ಟಿದೆ.
ಈ ಮೂಲಕ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಯತೀಂದ್ರ ಕಣಕ್ಕಿಳಿಯುತ್ತಾರೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಯತೀಂದ್ರ ಅವರನ್ನು ವರುಣಾ ಕ್ಷೇತ್ರದ ಜಾಗೃತಿ ಸಮಿತಿ ಅಧ್ಯಕ್ಷರಾಗಿ 2 ತಿಂಗಳ ಹಿಂದೆ ಸರ್ಕಾರ ನೇಮಿಸಿತ್ತು.