

ಬೆಂಗಳೂರು: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ತೊರೆದು ಬುಧವಾರ ಬಿಜೆಪಿ ಸೇರಲಿದ್ದಾರೆ.
ಜಯ ಪ್ರಕಾಶ್ ಹೆಗ್ಡೆ ಜೊತೆ ಈಗಾಗಲೇ ಕಾಂಗ್ರೆಸ್ ತೊರೆದಿರುವ ಬಳ್ಳಾರಿ ಜಿಲ್ಲೆ ಹೊಸಪೇಟೆ ಕ್ಷೇತ್ರದ ಮಾಜಿ ಶಾಸಕ ರತನ್ ಸಿಂಗ್ ಹಾಗೂ ಕುಮಾರ್ ಬಂಗಾರಪ್ಪ ಕೂಡ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಬ್ಬರನ್ನೂ ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ. ಬ್ರಹ್ಮಾವರ ಕ್ಷೇತ್ರ ದಿಂದ ಶಾಸಕರಾದ ಜಯಪ್ರಕಾಶ್ ಹೆಗ್ಡೆ ನಂತರ ಸಚಿವರಾಗಿಯೂ ಕೆಲಸ ಮಾಡಿದ್ದರು. ಜನತಾ ಪರಿವಾರದ ಒಳಜಗಳದ ಹಿನ್ನೆಲೆಯಲ್ಲಿ ಪಕ್ಷದಿಂದ ಹೊರಬಂದು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ ಕಾಂಗ್ರೆಸ್ ಸೇರಿದ್ದ ಅವರು, ಸಂಸದರಾಗಿದ್ದ ಡಿ.ವಿ.ಸದಾನಂದಗೌಡ ಮುಖ್ಯಮಂತ್ರಿ ಯಾದ ಬಳಿಕ ನಡೆದ ಉಪ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದರು.