ಮೈಸೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ನನಗೆ ಸಕ್ರಿಯ ರಾಜಕಾರಣ ಸಾಕಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎನ್ನುವ ಆಸೆಯಿಂದ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಈ ಬಾರಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ವರುಣಾ ಕ್ಷೇತ್ರದಿಂದ ಯತೀಂದ್ರ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಒಂದು ವೇಳೆ ಯತೀಂದ್ರ ಸ್ಪರ್ಧಿಸದಿದ್ದೇ ವರುಣಾ ಮತ್ತು ಚಾಮುಂಡೇಶ್ವರಿ ಎರಡೂ ಕ್ಷೇತ್ರಗಳಲ್ಲೂ ತಾವೇ ಸ್ಪರ್ಧಿಸುವುದಾಗಿ ಸಿಎಂ ತಿಳಿಸಿದ್ದಾರೆ. ಈ ಮೂಲಕ ವರುಣಾ ಕ್ಷೇತ್ರದಿಂದ ತಮ್ಮ ಪುತ್ರ ಡಾ.ಯತೀಂದ್ರ ಅಖಾಡಕ್ಕಿಳಿಯುವ ಮುನ್ಸೂಚನೆಯನ್ನೂ ನೀಡಿದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದ್ದೇವು. ಆದರೆ, ಯಡಿಯೂರಪ್ಪ ರೈತರ ಸಾಲ ಮನ್ನಾ ಮಾಡಲು ನಿರಾಕರಿಸಿದ್ದರು ಎಂದು ತಿರುಗೇಟು ನೀಡಿದರು.
ಮುಂದಿನ ಎಲೆಕ್ಷನ್‌ಗೆ ಚಾಮುಂಡೇಶ್ವರಿಗೆ ಬರೋದು. ಇನ್ನೇನ್ ಎಲೆಕ್ಷನ್ ಬರುತ್ತೆ ಎನ್ನುವುದರೊಂದಿಗೆ ಕ್ಷೇತ್ರ ಬದಲಾವಣೆಯ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ,ಎಲ್ಲರು ರೆಡಿಯಾಗಿ ಎಂದು ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ.