ಹಾಸನ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಲ್ಲಿ ದಾಖಲಾಗಿರುವ ಎಲ್ಲಾ ಪ್ರಕರಣಗಳ ತನಿಖೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಪರಿವರ್ತನ ಯಾತ್ರೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ವಿರೋಧಿಗಳ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದಕ್ಕಾಗಿ ಮತ್ತು ಕಾಂಗ್ರೆಸ್ ನಾಯಕರಿಗೆ ಕ್ಲೀನ್ ಚಿಟ್ ನೀಡುವುದಕ್ಕಾಗಿ ರಾಜ್ಯ ಸರ್ಕಾರ ಎಸಿಬಿ ರಚನೆ ಮಾಡಿದೆ ಎಂದು ಆರೋಪಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸಿದ ಬಿಎಸ್ ವೈ, ರಾಜ್ಯ ಸರ್ಕಾರ ಒಂದು ನಿರ್ಧಿಷ್ಟ ಸಮುದಾಯಕ್ಕೆ ಕೋಟ್ಯಾಂತರ ರುಪಾಯಿ ಯೋಜನೆ ಘೋಷಿಸುವ ಮೂಲಕ ಇತರರಿಗೆ ಮೋಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಜಾತಿ ಆಧಾರದ ಮೇಲೆ ರಾಜ್ಯ ಇಬ್ಭಾಗ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ನಡೆಸಲಾಗಿದೆ. ಇದಕ್ಕಾಗಿ ಸರ್ಕಾರ 40 ಕೋಟಿ ರುಪಾಯಿ ಖರ್ಚು ಮಾಡಿದೆ. ಆದರೂ ಇದುವರೆಗೂ ಜಾತಿ ಸಮೀಕ್ಷೆಯ ವರದಿ ಬಹಿರಂಗಪಡಿಸಿಲ್ಲ ಎಂದು ಮಾಜಿ ಸಿಎಂ ಹೇಳಿದ್ದಾರೆ.