ಬೆಳಗಾವಿ: ಶಿಕ್ಷಣದ ಹಕ್ಕು ಕಾಯ್ದೆ(ಆರ್ ಟಿಇ)ಯಿಂದಾಗಿ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತಿದ್ದು, ಆರ್ ಟಿಇ ಕಾಯ್ದೆಯನ್ನು ರದ್ದುಗೊಳಿಸುವಂತೆ ಬುಧವಾರ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಒತ್ತಾಯಿಸಿವೆ.
ಬಿಜೆಪಿ ಶಾಸಕ ಸಿಟಿ ರವಿ ಅವರು ಪ್ರಸ್ತಾಪಿಸಿದ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು, ಆರ್ ಟಿಇ ಕಾಯ್ದೆಯಿಂದಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ ಎಂದು ಒಪ್ಪಿಕೊಂಡರು.
ಸರ್ಕಾರಿ ಶಾಲೆಗಳಲ್ಲಿ 2014-15ನೇ ಸಾಲಿನಲ್ಲಿ 1ರಿಂದ 10ನೇ ತರಗತಿ ವರೆಗೆ 48.64 ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದರು. ಆದರೆ 2016-17ನೇ ಸಾಲಿನಲ್ಲಿ 46.50 ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಸಚಿವರು ಸದನಕ್ಕೆ ತಿಳಿಸಿದರು.
ಈ ವೇಳೆ ಮಾತನಾಡಿದ ಜೆಡಿಎಸ್ ಶಾಸಕ ವೈಎಸ್ ವಿ ದತ್ತಾ ಅವರು, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಕಡಿಮೆಯಾಗಲು ಆರ್ ಟಿಇ ಪ್ರಮುಖ ಕಾರಣ. ಹೀಗಾಗಿ ಆ ಮೀಸಲಾತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಆರ್ ಟಿಇ ಅಡಿ ಎಲ್ಲಾ ಶಾಸಗಿ ಶಾಲೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಶೇಕಡಾ 25ರಷ್ಟು ಸ್ಥಾನಗಳು ಮೀಸಲು ಇಡುವುದನ್ನು ಕಡ್ಡಾಯಗೊಳಿಸಲಾಗಿದೆ.