ಬೆಂಗಳೂರು: ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 300 ಕೋಟಿ ರೂಪಾಯಿ ನಷ್ಟವುಂಟುಮಾಡಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ರಾಜ್ಯ ಬಿಜೆಪಿ ನಿನ್ನೆ ಕೇಸು ದಾಖಲಿಸಿದೆ.
ಅಕ್ರಮ ಭೂ ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಇತರ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಅವರು ಆರೋಪಿಸಿದ ನಂತರ ಈ ಕೇಸನ್ನು ಬಿಜೆಪಿ ದಾಖಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಬಿಡಿಎಗೆ 300 ಕೋಟಿ ರೂಪಾಯಿ ನಷ್ಟವುಂಟುಮಾಡಿದ್ದಾರೆ ಎಂದು ಆರೋಪಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಎನ್.ಆರ್.ರಮೇಶ್ ದೂರು ಸಲ್ಲಿಸಿದ್ದಾರೆ.
ಬೆಂಗಳೂರು ಉತ್ತರ ತಾಲ್ಲೂಕು ಭೂಪಸಂದ್ರದಲ್ಲಿ ಸರ್ವೆ ನಂಬರ್ 20 ಮತ್ತು 21ರಲ್ಲಿ ಸುಮಾರು 6 ಎಕರೆಗಿಂತಲೂ ಅಧಿಕ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದಕ್ಕೆ ಮುಖ್ಯಮಂತ್ರಿಯವರು ನೇರ ಹೊಣೆ ಎಂದು ಪುಟ್ಟಸ್ವಾಮಿ ಕಳೆದ 10 ರಂದು ಆರೋಪಿಸಿದ್ದರು.
ಇದಕ್ಕೆ ಪ್ರತ್ಯುತ್ತರ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಸುಳ್ಳು ಆರೋಪವಾಗಿದ್ದು ಮುಂದಿನ ವರ್ಷ ವಿಧಾನಸಭೆ ಚುನಾವಣೆಗೆ ಮುನ್ನ ತಮ್ಮ ತೇಜೋವಧೆ ಮಾಡುವ ಉದ್ದೇಶವಾಗಿದೆ. ಪುಟ್ಟಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೇಸು ದಾಖಲಿಸಲು ಆಲೋಚಿಸುತ್ತಿರುವುದಾಗಿ ಹೇಳಿದ್ದಾರೆ.
ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿ ಆದೇಶ ಹೊರಡಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.