ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರ ವಿರುದ್ಧ ಕೇಸು ದಾಖಲಿಸಲಾಗಿದೆ.
ಚಿತ್ರದುರ್ಗ ಬಿಜೆಪಿ ಜಿಲ್ಲಾ ಅಧ್ಕ್ಷಕ್ಷ ಕೆಎಸ್ ನವೀನ್ ಅವರು ನೀಡಿದ ದೂರಿನ ಆಧಾರದ ಮೇಲೆ ಜಿಗ್ನೇಶ್ ಮೇವಾನಿ ಹಾಗೂ ಕೋಮು ಸೌಹಾರ್ದ ವೇದಿಕೆಯ ಜಿಲ್ಲಾ ಸಂಚಾಲಕ ಟಿ. ಷಫೀಉಲ್ಲಾ ಅವರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಅಲ್ಲದೆ ನವೀನ್ ಅವರು ಗುಜರಾತ್ ಶಾಸಕನ ವಿರುದ್ಧ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.
ಶುಕ್ರವಾರ ನಡೆದ 'ಸಂವಿಧಾನ ಉಳಿವಿಗಾಗಿ ಕರ್ನಾಟಕ' ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮೇವಾನಿ, ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾಗ ಕುರ್ಚಿಗಳನ್ನು ತೂರಿ, ಗದ್ದಲ ಮಾಡಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಗುಜರಾತ್ ಶಾಸಕರು ನೀಡಿರುವ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾಗಿದ್ದು, ಪ್ರಚೋದನಾತ್ಮಕವಾಗಿದೆ, ವಿವಾದಯುತವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜಿಗ್ನೇಶ್ ಮೇವಾನಿ ವಿರುದ್ಧ ಶಾಂತಿ ಭಂಗ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.