ಬೆಂಗಳೂರು: 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನೂ ಗುತ್ತಿಗೆ ಆಧಾರದಲ್ಲೇ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಕೆಲಸವನ್ನು ಕಾಯಂಗೊಳಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಭರವಸೆ ನೀಡಿದ್ದಾರೆ.
ಇಂದು ನಗರದ ಜಕ್ಕರಾಯನಕೆರೆ ಮೈದಾನದಲ್ಲಿ ಪೌರಕಾರ್ಮಿಕರೊಂದಿಗೆ ಸಂವಾದ ನಡೆಸಿದ ರಾಹುಲ್ ಗಾಂಧಿ, ಪೌರ ಕಾರ್ಮಿಕರ ಸಮಸ್ಯೆಗಳಿಗೆ ನಾವು ಸ್ಪಂದಿಸುತ್ತೇವೆ. ನೀವೆಲ್ಲ ಕಷ್ಟದ ಜೀವಿಗಳು. ನಿಮಗೆ ಎಂದೂ ಅನ್ಯಾಯ ಮಾಡುವುದಿಲ್ಲ. ಇಂದಿರಾ ಕ್ಯಾಂಟಿನ್ ಸೌಲಭ್ಯವನ್ನು ಬಳಸಿಕೊಳ್ಳಿ. ನಿಮ್ಮ ಕುಟುಂಬದ ಜವಾಬ್ದಾರಿಯನ್ನು ನಮಗೆ ಬಿಡಿ ಎಂದರು.
ಈ ವೇಳೆ ರಾಜ್ಯ ಸರ್ಕಾರ ನಮ್ಮ ಸಮಸ್ಯೆಗಳನ್ನು ಬಗೆಹರಿಸಿದೆ. ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು. ಪೌರ ಕಾರ್ಮಿಕರು ಇನ್ನೂ ಗುತ್ತಿಗೆ ಆಧಾರದಲ್ಲೇ ದುಡಿಯುತ್ತಿದ್ದಾರೆ. ಅವರ ಕೆಲಸವನ್ನು ಕಾಯಂಗೊಳಿಸಬೇಕು ಎಂದು ಕಾರ್ಮಿಕರು ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಬಿಬಿಎಂಪಿ ಮೇಯರ್ ಸಂಪತ್‌ರಾಜ್ ಸಹ ಸಂವಾದದಲ್ಲಿ ಭಾಗವಹಿಸಿದ್ದರು.