ರಾಜಕೀಯ

'ಯೋಗಿ ಆದಿತ್ಯಾನಾಥ್ ಅಲ್ಲ, ಡೋಂಗಿ ಆದಿತ್ಯಾನಾಥ್': ಉತ್ತರ ಪ್ರದೇಶ ಸಿಎಂ ವಿರುದ್ಧ ದಿನೇಶ್ ಗುಂಡೂರಾವ್ ಟೀಕಾ ಪ್ರಹಾರ

'ಯೋಗಿ ಆದಿತ್ಯಾನಾಥ್ ಅಲ್ಲ, ಡೋಂಗಿ ಆದಿತ್ಯಾನಾಥ್': ಉತ್ತರ ಪ್ರದೇಶ ಸಿಎಂ ವಿರುದ್ಧ ದಿನೇಶ್ ಗುಂಡೂರಾವ್ ಟೀಕಾ ಪ್ರಹಾರ
ಸಂಗ್ರಹ ಚಿತ್ರ
Published On :
ಬೆಂಗಳೂರು: ಉನ್ನಾವ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ವಿರುದ್ದ ಟೀಕಾ ಪ್ರಹಾರ ಮಾಡಿರುವ ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಅವರು, ಯೋಗಿ ಆದಿತ್ಯಾನಾಥ್ ಅಲ್ಲ, ಡೋಂಗಿ ಆದಿತ್ಯಾನಾಥ್, ಅವರು ಮತ್ತೆ ಏನಾದ್ರೂ ಮತ್ತೆ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಉನ್ನಾವ್ ಮತ್ತು ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್ ನ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಮಾತನಾಡಿದರು. ಈ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಟೀಕಾ ಪ್ರಹಾರವನ್ನು ನಡೆಸಿದ ಅವರು, 'ಯೋಗಿ ಆದಿತ್ಯಾನಾಥ್ ಮುಖ್ಯಮಂತ್ರಿ ಸ್ಥಾನದಲ್ಲಿ ಇರಲು ಅರ್ಹರಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಿ ಅವರನ್ನು ಸಿಎಂ ಸ್ಥಾನದಿಂದ ಕಿತ್ತೊಗೆಯಬೇಕು. ಅವರು ಕರ್ನಾಟಕಕ್ಕೆ ಬಂದು ಭಾಷಣ ಮಾಡುತ್ತಾರೆ. ಈ ಬಾರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿದರು.
ತಮ್ಮ ಭಾಷಣದುದ್ದಕ್ಕೂ ಸಿಎಂ ಆದಿತ್ಯನಾಥ್ ರನ್ನು ಏಕವಚನದಲ್ಲೇ ವಾಗ್ದಾಳಿ ನಡೆಸಿದ ದಿನೇಶ್ ಗುಂಡೂರಾವ್, ಅದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ನಾಡಿಗೆ ಅಪಮಾನವಾಗುತ್ತದೆ ಎಂದು ಹೇಳಿದರು.
ಗುಂಡೂ ರಾವ್ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ, ಕ್ಷಮೆಗೆ ಆಗ್ರಹ
ಇನ್ನು ದಿನೇಶ್ ಗುಂಡೂರಾವ್ ಅವರ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಗುಂಡೂರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕ್ಷಮೆಗೆ ಆಗ್ರಹಿಸಿದೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರ ವಿರುದ್ಧ ಗುಂಡೂರಾವ್ ಅವರು ನೀಡಿರುವ ಹೇಳಿಕೆ ಆಕ್ಷೇಪಾರ್ಹ. ಕೂಡಲೇ ಅವರು ಯೋಗಿ ಅವರ ಬೇಷರತ್ ಕ್ಷಮೆ ಯಾಚಿಸಬೇಕು ಎಲ್ಲವಾದಲ್ಲಿ ರಾಜ್ಯಾದ್ಯಂತ ಗುಂಡೂರಾವ್ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ರಾಜ್ಯಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬರಲು ಬಿಡುವುದಿಲ್ಲ. ಅವರು ಹೋದಲ್ಲಿ ಬಂದಲ್ಲಿ ಎಲ್ಲೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಅಂತೆಯೇ ಗುಂಡೂರಾವ್ ಅವರನ್ನೂ ಕೂಡಲೇ ಬಂಧಿಸಬೇಕು ಎಂದು ಶೋಭಾ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.