
ಬಾದಾಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿಯಿಂದ ಬಿ.ಶ್ರೀರಾಮುಲು ಪ್ರಮುಖ ಆಕರ್ಷಣೆಯ ಕೇಂದ್ರವಾದ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಮೂಲಕ ವಿಧಾನಸಭೆ ಚುನಾವಣೆಯ ಸ್ಪರ್ಧಾಕಣ ರಂಗೇರುತ್ತಿದೆ.
ಈ ಮೂಲಕ ಇಷ್ಟು ದಿನಗಳವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆಯೇ ಇಲ್ಲವೇ ಎಂಬ ಚರ್ಚೆ, ಕುತೂಹಲಗಳಿಗೆ ತೆರೆಬಿದ್ದಿದೆ.
ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿಯಿಂದ ಬಿ.ಶ್ರೀರಾಮುಲು ತಮ್ಮ ಅಪಾರ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ಬಾದಾಮಿ ತಾಲ್ಲೂಕು ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರುತ್ತಿದ್ದಂತೆ 100ಕ್ಕೂ ಹೆಚ್ಚು ಎತ್ತಿನ ಗಾಡಿಗಳಲ್ಲಿ ಬಂದ ಜನರು ಸಾಂಪ್ರದಾಯಿಕವಾಗಿ ಮುಖ್ಯಮಂತ್ರಿಯವರನ್ನು ಬರಮಾಡಿಕೊಂಡರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಬಾದಾಮಿಯ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ರೋಡ್ ಶೋ ಹಾಗೂ ಕಾಳಿದಾಸ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಿದರು.
ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರ ಜೊತೆ ಕೇಂದ್ರ ಸಚಿವ ಪ್ರಕಾಶ್ ಜಾವದೇಕರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯ ಉಸ್ತುವಾರಿ ಪಿ.ಮುರಳೀಧರ ರಾವ್ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕೂಡ ಇದ್ದರು.
ಈ ಮೂಲಕ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರ ಭಾರೀ ಜಿದ್ದಾಜಿದ್ದಿಗೆ ಕಾರಣವಾಗಲಿದ್ದು ಇಬ್ಬರು ಅಭ್ಯರ್ಥಿಗಳು ಕೂಡ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ.
Advertisement