ಬೆಂಗಳೂರು: ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಗುರುವಾರ ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಿರುವುದು ಬಿಜೆಪಿ ಪ್ರಾಯೋಜಿತ ಎಂದು ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಅವರು ಬುಧವಾರ ಆರೋಪಿಸಿದ್ದಾರೆ,
ಉತ್ತರ ಕರ್ನಾಟಕ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿ ಕೆ ಶಿವಕುಮಾರ್ ಅವರು, ವಿವಾದ ಹುಟ್ಟು ಹಾಕಿದ್ದು ಯಾರು? ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡಿದ್ದು ಯಾರು?, ಬಿಜೆಪಿಯವರ ರಾಜ್ಯ ಒಡೆಯುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ - ಜೆಡಿಎಸ್ ಸರ್ಕಾರ ಅಖಂಡ ಕರ್ನಾಟಕಕ್ಕಾಗಿ ಕೆಲಸ ಮಾಡಲಿದೆ. ರಾಜ್ಯದ ಯಾವುದೇ ಭಾಗಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ನಾವು ಎಲ್ಲರನ್ನು ಸಮಾನವಾಗಿ ಕಾಣುತ್ತೇವೆ ಎಂದರು.
ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಪ್ರತ್ಯೇಕ ರಾಜ್ಯಕ್ಕಾಗಿ ನಾಳೆ ಉತ್ತರ ಕರ್ನಾಟಕ ಬಂದ್ ಕರೆ ನೀಡಲಾಗಿತ್ತು. ಆದರೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಭರವಸೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಬಂದ್ ಹಿಂಪಡೆದಿದೆ.