ಸ್ಥಳೀಯಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿ ಬೇಡವೇ ಬೇಡ: ಲೋಕಸಭೆಗೆ ಸ್ಫರ್ಧಿಸಲು ಸಿದ್ದುಗೆ 'ಕೈ'ಕಾರ್ಯಕರ್ತರ ಒತ್ತಡ!

ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿಗೆ ನಿರ್ಧರಿಸಿದೆ, ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ .
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿಗೆ ನಿರ್ಧರಿಸಿದೆ, ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಕಾಂಗ್ರೆಸ್ ಜಿಲ್ಲಾ ಹಾಗೂ ತಾಲೂಕು ಮಟ್ಟದ ಮುಖಂಡರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ.
ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅಧ್ಯಕ್ಷತೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ ಕಾರ್ಯಾಧ್ಯಕ್ಷ  ಈಶ್ವರ್‌ ಖಂಡ್ರೆ ಅವರು ಶುಕ್ರವಾರ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು, ಮಂಡ್ಯ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರಗಳ ಮುಖಂಡರ ಸಭೆ ನಡೆಸಿ ಸಜ್ಜಾಗುವಂತೆ ಸೂಚಿಸಿದರು.
ಲೋಕಸಭೆ ಚುನಾವಣೆಯಲ್ಲಿಯೂ  ಜೆಡಿಎಸ್‌ ಜತೆ ಮೈತ್ರಿ ಬೇಡ ಎಂದು ಹಳೆ ಮೈಸೂರು ಭಾಗದ ಕಾಂಗ್ರೆಸ್‌ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಬಿಜೆಪಿ ನಮ್ಮ ಸಾಂಪ್ರಾದಾಯಿಕ ಶತೃ, ಜೆಡಿಎಸ್ ನಮ್ಮ ಪ್ರಮುಖ  ರಾಜಕೀಯ ಪ್ರತಿಸ್ಪರ್ಧಿ, ಹೀಗಾಗಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೇ ಪಕ್ಷಕ್ಕೆ ದೊಡ್ಡ ಹೊಡೆತ ಬೀಳುತ್ತದೆ ಎಂದು ಸ್ಥಳೀಯ ನಾಯಕರು ವಾದಿಸಿದ್ದಾರೆ.
ಹಾಸನ ಮತ್ತು ಮಂಡ್ಯ ಕ್ಷೇತ್ರದಲ್ಲಿ ಕಳೆದ ಬಾರಿ ಜೆಡಿಎಸ್‌ ಗೆದ್ದಿದ್ದು ಮೈತ್ರಿಯಾದರೆ ಈ ಎರಡೂ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕಾಗುತ್ತದೆ. ಅಂತಹ ಕ್ರಮ ಕೈಗೊಂಡರೆ ಎರಡೂ ಜಿಲ್ಲೆಗಳಲ್ಲಿ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಹಾಸನ ಲೋಕಸಭೆ ಕ್ಷೇತ್ರ ಕುರಿತ ಸಭೆಯಲ್ಲಿ ಯಾವುದೇ ಕಾರಣಕ್ಕೂ ಜೆಡಿಎಸ್‌ ಜತೆ ಮೈತ್ರಿ ಬೇಡ. ಸ್ವತಂತ್ರವಾಗಿ ಸ್ಪರ್ಧೆ ಮಾಡೋಣ.  ಈಗಾಗಲೇ ಜಿಲ್ಲೆಯಲ್ಲಿ ಜೆಡಿಎಸ್‌ ಮೇಲುಗೈ ಸಾಧಿಸಿದೆ. ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಮಾಡಿಕೊಂಡರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರವನ್ನು ಜೆಡಿಎಸ್‌ ಬಯಸಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರವನ್ನು ಕಾಂಗ್ರೆಸ್‌ ಉಳಿಸಿಕೊಳ್ಳಬೇಕು ಎಂದು ಜಿಲ್ಲಾ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ಸಿದ್ದರಾಮಯ್ಯ ಸಮ್ಮತಿಸಿಲ್ಲ ಎಂದು ಹೇಳಲಾಗಿದೆ. 
ಆಗಸ್ಟ್ 29 ರಂದು ನಡೆಯುವ 105  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ  ಜೆಡಿಎಸ್ ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸಲಿದೆ, ತಳ ಮಟ್ಟದ ಕಾರ್ಯಕರ್ತರಿಂದ ಜೆಡಿಎಸ್ ಮೈತ್ರಿಗೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ, 
ಶುಕ್ರವಾರ ಸಭೆ ನಡೆಸಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ, ಕೆ.ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆ ನಡೆಸಿ, ಜಿಲ್ಲಾ ಮತ್ತು ತಾಲೂಕು ಕಾಂಗ್ರೆಸ್ ಮುಖಂಡರಿಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.
ನಿನ್ನೆ ನಡೆದ ಸಭೆಯಲ್ಲಿ, ಈ ಸಂಬಂಧ ಚರ್ಚೆಯಾಗಿದ್ದು, ಒಂದು ವೇಳೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಜೊತೆ ಸೀಟು ಹಂಚಿಕೊಂಡರೇ ತಾವು ಬಿಜೆಪಿ ಸೇರುವುದಾಗಿ ಸ್ಥಳೀಯ ನಾಯಕರು ಬೆದರಿಕೆಯೊಡ್ಡಿದ ಹಿನ್ನೆಲೆಯಲ್ಲಿ ಮೈತ್ರಿಯಿಂದ ಹಿಂದೆ ಸರಿಯಲಾಗಿದೆ ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com