ರಾಜಕೀಯ
ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ: ಎಚ್ ಡಿ ದೇವೇಗೌಡ
ತಮ್ಮ ಪುತ್ರ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣ ಪ್ರವೇಶ ಮಾಡುವ ಸಾಧ್ಯತೆ ಇದೆ ಎಂದು ಮಾಜಿ....
ಹಾಸನ: ತಮ್ಮ ಪುತ್ರ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣ ಪ್ರವೇಶ ಮಾಡುವ ಸಾಧ್ಯತೆ ಇದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಸೋಮವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಕುಮಾರಸ್ವಾಮಿ ಅವರು ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಐದು ವರ್ಷ ಅವಧಿ ಪೂರ್ಣಗೊಳಿಸಿದ ನಂತರ ರಾಷ್ಟ್ರ ರಾಜಕಾರಣಕ್ಕೆ ತೆರಳುವ ನಿರೀಕ್ಷೆ ಇದೆ ಎಂದಿದ್ದಾರೆ.
ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ದೇವೇಗೌಡರು, ಲೋಕಸಭೆ ಚುನಾವಣೆಗೂ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಬೀಳಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಕುಮಾರಸ್ವಾಮಿಯನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಅವರನ್ನು ಅಧಿಕಾರದಿಂದ ಇಳಿಸುವ ಎಲ್ಲಾ ಯತ್ನ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿರುವುದರಿಂದ ದೋಸ್ತಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾವು ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಪುನರುಚ್ಚರಿಸಿದ ದೇವೇಗೌಡರು, ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನಿಂದ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದಾರೆ.
ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದ ಮಾಜಿ ಪ್ರಧಾನಿ, 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದರು.