ರಾಜ್ಯ ಸಂಪುಟ ವಿಸ್ತರಣೆಗೆ ಅನುಮತಿ ನೀಡುವಂತೆ ರಾಹುಲ್ ಗಾಂಧಿಗೆ ಕುಮಾರಸ್ವಾಮಿ ಆಗ್ರಹ
ನವದೆಹಲಿ: ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಸುಧೀರ್ಘ ಹೊತ್ತು ಮಾತುಕತೆ ನಡೆಸಿದ ಕುಮಾರಸ್ವಾಮಿ, ಸಂಮ್ಮಿಶ್ರ ಸರ್ಕಾರದ 100 ದಿನಗಳ ಕಾರ್ಯನಿರ್ವಹಣೆ ಬಗ್ಗೆ ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸಿದರು. ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಿಂದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಂಪುಟ ವಿಸ್ತರಣೆ ಹಾಗೂ ನಿಗಮ, ಮಂಡಳಿ ಅಧ್ಯಕ್ಷ- ಉಪಾಧ್ಯಕ್ಷರ ನೇಮಕ ಸಂಬಂಧ ಶೀಘ್ರವೇ ನಿರ್ಧಾರ ಕೈಗೊಳ್ಳುವಂತೆ ರಾಹುಲ್ ಗಾಂಧಿ ಅವರ ಬಳಿ ಮನವಿ ಮಾಡಲಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಪ್ರಸ್ತುತ 16 ಕಾಂಗ್ರೆಸ್ ಸಚಿವರು, ಹಾಗೂ 10 ಜೆಡಿಎಸ್ ಸದಸ್ಯರು ಸಂಪುಟದಲ್ಲಿದ್ದಾರೆ. ಕಾಂಗ್ರೆಸ್ ನಿಂದ ಮೂರು ಹಾಗೂ ಜೆಡಿಎಸ್ ನಿಂದ ಒಂದು ಸ್ಥಾನ ತುಂಬಲು ನಿರ್ಧರಿಸಲಾಗಿದೆ.
ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಾಗಿ ಹೇಳಿರುವ ಹೇಳಿಕೆ ಬಗ್ಗೆ ನಾಳೆ ನಡೆಯಲಿರುವ ಜೆಡಿಎಸ್- ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆಯಾಗುವ ಸಂಬಂಧವೂ ಕುಮಾರಸ್ವಾಮಿ, ರಾಹುಲ್ ಗಾಂಧಿ ಜೊತೆಗೆ ಚರ್ಚೆ ನಡೆಸಿದ್ದಾರೆ
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ