ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವೆ ಎಂದು ಹೇಳಿದ್ದರಲ್ಲಿ ತಪ್ಪೇನು?: ಹೆಚ್ ಡಿ ಕುಮಾರಸ್ವಾಮಿ

ರಾಜ್ಯ ಸಮ್ಮಿಶ್ರ ಸರ್ಕಾರ ಗುರುವಾರ ನೂರನೆಯ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಗುರುವಾರ ನೂರನೆಯ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ನಂತರ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ನೂರು ದಿನಗಳ ಆಡಳಿತ ಪೂರೈಸಿದ ಸಂದರ್ಭದಲ್ಲಿ ರಾಹುಲ್ ಗಾಂಧಿಯವರಿಗೆ ಕೃತಜ್ಞತೆ ಸಲ್ಲಿಸಲು ದೆಹಲಿಗೆ ಬಂದಿದ್ದೇನೆ. ಕರ್ನಾಟಕ ಸಮ್ಮಿಶ್ರ ಸರ್ಕಾರ ಸುಗಮವಾಗಿ ನಡೆದುಕೊಂಡು ಹೋಗುವ ರೀತಿ ಅವರಿಗೆ ಖುಷಿ ತಂದಿದೆ. ನಮ್ಮ ಸರ್ಕಾರ ಸುಭದ್ರವಾಗಿದ್ದು ಸುಗಮವಾಗಿ ನಡೆದುಕೊಂಡು ಹೋಗುತ್ತಿದೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸಮ್ಮಿಶ್ರ ಸರ್ಕಾರ 'ಸಮಗ್ರ ಕರ್ನಾಟಕ- ಸಮೃದ್ಧ ಕರ್ನಾಟಕ' ಎನ್ನುವ ಆಶಯಕ್ಕೆ ಬದ್ಧವಾಗಿದೆ. ಇದನ್ನು ಸಾಧಿಸಲು ಹಲವು ಯೋಜನೆ ಹಾಗೂ ನೀತಿಗಳನ್ನು ರೂಪಿಸಿದ್ದೇವೆ. ಈ ಸರ್ಕಾರಕ್ಕೆ ತುಂಬು ಹೃದಯದ ಬೆಂಬಲ ನೀಡಿರುವ ನನ್ನ ಸಮ್ಮಿಶ್ರ ಸರ್ಕಾರದ ಒಡನಾಡಿಗಳಿಗೆ, ಜನ ನಾಯಕರುಗಳಿಗೆ, ಜನತೆಗೆ ಹಾಗೂ ಮಾಧ್ಯಮಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಕಳೆದ ನೂರು ದಿನಗಳಲ್ಲಿ ಸರ್ಕಾರದ ಆಡಳಿತದಲ್ಲಿ ಅಧಿಕಾರಿಗಳು ನಮ್ಮ ಜೊತೆಗೆ ಸಾಗುತ್ತಿದ್ದು ನಿರೀಕ್ಷೆಗೆ ತಕ್ಕಂತೆ ಕೆಲಸಗಳು ನಡೆಯುತ್ತಿವೆ. ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ, ಸರ್ಕಾರದ ಆದಾಯದಲ್ಲಿ ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು ದಾಖಲೆಯ ಹಣ ಸಂಗ್ರಹವಾಗಿದೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ರೈತ ಸಮುದಾಯ ಬಯಸಿದ್ದನ್ನು ಈಡೇರಿಸಿದ್ದೇವೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗುತ್ತೇನೆ ಎಂದು ಹೇಳಿರುವುದರ ಬಗ್ಗೆ ನಾನು ರಾಹುಲ್ ಗಾಂಧಿಯವರ ಜೊತೆ ಚರ್ಚೆ ಮಾಡಿಲ್ಲ, ಕೆಲವರು ಆರ್ ವಿ ದೇಶಪಾಂಡೆ ಮುಖ್ಯಮಂತ್ರಿಯಾಗಬೇಕು ಎನ್ನುತ್ತಿದ್ದಾರೆ. ಅಷ್ಟಕ್ಕೂ ಅವರು ಹೇಳಿರುವುದರಲ್ಲಿ ತಪ್ಪೇನಿದೆ, ಅವರು ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರಲ್ಲಿನ ಭಿನ್ನಾಭಿಪ್ರಾಯಗಳು, ಅವರ ಹೇಳಿಕೆಗಳ ಬಗ್ಗೆ ನಾನು ರಾಹುಲ್ ಗಾಂಧಿಯವರ ಜೊತೆ ಚರ್ಚೆ ಮಾಡಲಿಲ್ಲ ಎಂದು ಸಿಎಂ ತಿಳಿಸಿದರು.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com