ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ಜೆಡಿಎಸ್ ಪಕ್ಷದವೇ ಆಗಿದ್ದರೂ, ಡಿ.8 ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರು ಭಾಗವಹಿಸಲಿದ್ದಾರೆ.
ಮೈತ್ರಿ ಸರ್ಕಾರದ ಬಗ್ಗೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಮನವೊಲಿಸುವ ಪ್ರಯತ್ನಕ್ಕೆ ಮುಂದಾಗಿರುವ ಕುಮಾರಸ್ವಾಮಿಯವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಪಲ್ ಹನುಮಂತಯ್ಯ ಅವರ 38ನೇ ಪುಣ್ಯ ಸ್ಮರಣೆ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿನ ಅವರ ಪ್ರತಿಮೆಗೆ ಶನಿವಾರ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು ಈ ವಿಚಾರ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕರ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ. ತಮ್ಮ ಕ್ಷೇತ್ರಗಳಲ್ಲಿ ತಾವು ಹೇಳಿಕ ಕೆಲಸಗಳು ಆಗುತ್ತಿಲ್ಲ ಆರೋಪಗಳು ಸೇರಿದಂತೆ ಇತರೆ ಸಮಸ್ಯೆಗಳ ಕುರಿತು ನೇರವಾಗಿ ಕಾಂಗ್ರೆಸ್ ಶಾಸಕರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುತ್ತದೆ.
ಡಿ.8ರಂದು ನಡೆಯಿಸುವ ಸಿಎಲ್'ಪಿಯಲ್ಲಿ ಪಾಲ್ಗೊಂಡು ಶಾಸಕರ ಅಹವಾಲು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.
ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರಲ್ಲಿ ನಾನೇ ಮನವಿ ಮಾಡಿದ್ದು, ಶಾಸಕರ ಸಮಸ್ಯೆಗಳನ್ನು ನೇರವಾಗಿ ಆಲಿಸಲು, ಚರ್ಚಿಸಲು ಅವಕಾಶ ನೀಡವಂತೆ ಕೇಳಿದ್ದೆ. ಹೀಗಾಗಿ ಅವಕಾಶ ನೀಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.
ಯಾವುದೇ ಗೊಂದಗಳಿದ್ದರೂ ಚರ್ಚಿಸಿ ಬಗೆಹರಿಸಿಕೊಳ್ಳಲು ಈ ಸಭೆ ಸಹಕಾರಿಯಾಗಲಿದೆ. ಹೀಗಾಗಿ ಸಿಎಲ್'ಪಿ ಸಭೆಯಲ್ಲಿ ಭಾಗವಿಸುತ್ತಿದ್ದೇನೆ. ಶಾಸಕರ ಕ್ಷೇತ್ರದ ಸಮಸ್ಯೆಗಳು, ಅನುದಾನ, ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.