ಕಾಂಗ್ರೆಸ್ ಶಾಸಕಾಂಗ ಸಭೆಗೆ ಸಿಎಂ ಕುಮಾರಸ್ವಾಮಿಗೆ ಆಹ್ವಾನ ನೀಡಿಲ್ಲ: ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷ ಶಾಸಕರ ಅಸಮಧಾನವನ್ನು ದೂರ ಮಾಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಭಾಗವಹಿಸಲು ಮುಂದಾಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇದೀಗ ಸಭೆಗೆ ಗೈರು ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ...
ಬೆಂಗಳೂರು: ಕಾಂಗ್ರೆಸ್ ಪಕ್ಷ ಶಾಸಕರ ಅಸಮಧಾನವನ್ನು ದೂರ ಮಾಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಭಾಗವಹಿಸಲು ಮುಂದಾಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇದೀಗ ಸಭೆಗೆ ಗೈರು ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ.
ಕುಮಾರಸ್ವಾಮಿಯವರು ಆಗಮಿಸುವುದಿಲ್ಲ ಎಂಬುದನ್ನು ಸ್ವತಃ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ.
ಸುವರ್ಣಸೌಧದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಸಭೆಗೆ ಕುಮಾರಸ್ವಾಮಿಯವರನ್ನು ಆಹ್ವಾನಿಸಿಲ್ಲ. ಹೀಗಾಗಿ ಕುಮಾರಸ್ವಾಮಿಯವರು ಸಭೆ ಬರುತ್ತಿಲ್ಲ. ಮತ್ತೊಮ್ಮೆ ಎರಡೂ ಪಕ್ಷಗಳ ಜಂಟಿ ಸಭೆ ಕರೆಯಲಾಗುವುದು ಆಗ ಕುಮಾರಸ್ವಾಮಿಯವರನ್ನು ಕರೆಯಲಾಗುತ್ತದೆ ಎಂದು ತಿಳಿಸಿದ್ದಾರೆ.
ಮತ್ತೊಮ್ಮೆ ಎರಡೂ ಪಕ್ಷಗಳು ನಡೆಸುವ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವರು, 2 ಪಕ್ಷಗಳ ಶಾಸಕರು ಭಾಗವಹಿಸಲಿದ್ದಾರೆ. ಮಂಗಳವಾರ ನಡೆಯುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಂಪುಟ ವಿಸ್ತರಣೆಯು ಡಿ.22 ರಂದು ಬಹುತೇಕ ನಡೆಯಲಿದೆ. ಸಚಿವರು ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ. ಕಾಂಗ್ರೆಸ್ ನಲ್ಲಿನ ಎಲ್ಲಾ ಆರು ಸ್ಥಾನ ತುಂಬುತ್ತೇವೆ. 30 ನಿಗಮ ಮಂಡಳಿಗಳ ಅಧ್ಯಕ್ಷ ನೇಮಕ ಮಾಡುತ್ತೇವೆ. 20 ಕಾಂಗ್ರೆಸ್'ಗೆ ಹಾಗೂ 10 ಜೆಡಿಎಸ್'ಗೆ ನೀಡಲಾಗುವುದು. ಅಲ್ಲದೆ, 8 ಮತ್ತು 10 ಸಂಸದೀಯ ಕಾರ್ಯದರ್ಶಿಗಳನ್ನು ನೇಮಿಸಲಾಗುತ್ತದೆ ಎಂದಿದ್ದಾರೆ.