ನವೆದಹಲಿ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫೆ.24 ರಿಂದ ಎರಡನೇ ಹಂತದಲ್ಲಿ ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಮುಂಬೈ- ಕರ್ನಾಟಕ ಭಾಗದ ಬೆಳಗಾವಿ. ವಿಜಯಪುರ, ಬಾಗಲಕೋಟೆ, ಮತ್ತು ಧಾರವಾಡ ಜಿಲ್ಲೆಗಳಲ್ಲಿ ರಾಹುಲ್ ಗಾಂಧಿ ಮೂರು ದಿನ ಜನಾರ್ಶೀವಾದ ಯಾತ್ರೆ ನಡೆಸಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಮಾಣಿಕಾಂ ತಾಗೊರೆ ತಿಳಿಸಿದ್ದಾರೆ.
ಪ್ರವಾಸದ ವೇಳೆ ಮ್ಯಾರಥಾನ್ ಗೆ ರಾಹುಲ್ ಗಾಂಧಿ ಚಾಲನೆ ನೀಡಲಿದ್ದು, ಮಹಿಳಾ ಗುಂಪು ,ಮತ್ತಿತರ ಸಾಮಾಜಿಕ ಗುಂಪಿನೊಂದಿಗೆ ಸಂವಾದ ನಡೆಸಲಿದ್ದಾರೆ. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುವ ಸಾಧ್ಯತೆಯೂ ಇದೆ . ಬಹುಹಂತದ ಕಾರ್ಯಚಟುವಟಿಕೆಗಳಿಂದಾಗಿ ಬಸ್ ನಲ್ಲಿ ಸಂಚರಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಫೆ.10ರಿಂದ 13ರವರೆಗೂ ನಡೆದಿದ್ದ ಮೊದಲ ಹಂತದ ಪ್ರವಾಸದಲ್ಲಿ ರಾಹುಲ್ ಗಾಂಧಿ ಹೈದ್ರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಾದ ಕೊಪ್ಪಳ, ರಾಯಚೂರು,ಕಲಬುರಗಿಯಲ್ಲಿ ಜನಾರ್ಶೀವಾದ ಯಾತ್ರೆ ನಡೆಸಿದ್ದರು.
224 ವಿಧಾನಸಭಾ ಕ್ಷೇತ್ರದ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನ ರಾಷ್ಟ್ರೀಯ ಮಟ್ಟದ ನಾಯಕರು ಈಗಾಗಲೇ ಪ್ರಚಾರ ನಡೆಸುತ್ತಿದ್ದಾರೆ.
ಆಡಳಿತಾರೂಢ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿದ್ದರೆ, ದಕ್ಷಿಣ ಭಾರತದಲ್ಲೇ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಶತಪ್ರಯತ್ನ ನಡೆಸುತ್ತಿದೆ. ಜೆಡಿಎಸ್ ಬಿಎಸ್ ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ರಾಷ್ಟ್ರೀಯ ಪಕ್ಷಗಳನ್ನು ಅಧಿಕಾರದಿಂದ ದೂರವಿಡಲು ಯತ್ನಿಸುತ್ತಿದೆ.
ಜೆಡಿಎಸ್ ವರಿಷ್ಠ ಹೆಚ್ . ಡಿ. ದೇವೇಗೌಡರು ಇಳಿವಯಸ್ಸಿನಲ್ಲೂ ಕಾಲಿಗೆ ಚಕ್ರ ಸುತ್ತಿ ಕೊಂಡವರಂತೆ ರಾಜ್ಯ ಪ್ರವಾಸ ಮಾಡುತ್ತಾ ಪಕ್ಷ ಸಂಘಟನೆ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ.
Advertisement