ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ನಾವು ಗೆಲುವು ಸಾಧಿಸಲೇಬೇಕು: ಸಿಎಂ ಸಿದ್ದರಾಮಯ್ಯಗೆ ರಾಹುಲ್
ಕರ್ನಾಟಕ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲೇಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ...
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲೇಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಹೊಸವರ್ಷ ಹಿನ್ನಲೆಯಲ್ಲಿ ಡಿ.31ರ ಮಧ್ಯರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿರುವ ರಾಹುಲ್ ಗಾಂಧಿಯವರು ಹೊಸವರ್ಷದ ಶುಭಾಶಯಗಳನ್ನು ಹೇಳಿದ್ದಾರೆ. ಅಲ್ಲದೆ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ರೀತಿಯ ಯಶಸ್ಸುಗಳು ಸಿಗಲಿ ಎಂದು ಆಶಿಸಿದ್ದಾರೆಂದು ತಿಳಿದುಬಂದಿದೆ.
10 ನಿಮಿಷಗಳ ಕಾಲ ಇಬ್ಬರ ನಡುವೆ ಮಾತುಕತೆ ನಡೆಸಿದ್ದು, ಮಾತುಕತೆ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಬಿಜೆಪಿ ನಾಯಕರೊಂದಿಗೆ ನಡೆಸಿದ ಮಾತುಕತೆ ಕುರಿತಂತೆ ಮಾಹಿತಿ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಈ ನಡುವೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊಂಡಾಡಿರುವ ರಾಹುಲ್ ಅವರು, ಕರ್ನಾಟಕ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾವು ಗೆಲವು ಸಾಧಿಸಲೇಬೇಕು ಎಂದಿದ್ದಾರೆಂದು ತಿಳಿದುಬಂದಿದೆ.
ಹೊಸವರ್ಷದ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಸಮಯ ಕಳೆದಿದ್ದಾರೆ.
ರಾಹುಲ್ ಅವರು ಇದೇ ಜನವರಿ ತಿಂಗಳಿನ ಕೊನೆಯ ವಾರದಲ್ಲಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಹುಲ್ ಅವರ ರಾಜ್ಯ ಭೇಟಿ ದಿನಾಂಕ ಶೀಘ್ರದಲ್ಲಿಯೇ ಅಂತಿಮಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕೆಲ ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಲಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರು ಹೇಳಿದ್ದಾರೆ.