ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಯು-ಟರ್ನ್ ಹೊಡೆದ ಸಿದ್ದರಾಮಯ್ಯ, ಅನ್ಯಭಾಗ್ಯ ಅಕ್ಕಿ ಕಡಿತಕ್ಕೂ ವಿರೋಧ

ಕಾಂಗ್ರೆಸ್ -ಜೆಡಿಎಸ್ ದೊಸ್ತಿ ಸರ್ಕಾರದ ಕಥೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ -ಜೆಡಿಎಸ್ ದೊಸ್ತಿ ಸರ್ಕಾರದ ಕಥೆಯಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಯು-ಟರ್ನ್ ಹೊಡೆದಿದ್ದಾರೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಮೊದಲ ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಿಸಿದ್ದರು. ಬಜೆಟ್ ನಂತರ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ, ಸಂಪನ್ಮೂಲ ಕ್ರೋಡಿಕರಣಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ವಲ್ಪ ಏರಿಕೆ ಮಾಡಲಾಗಿದೆ. ಇದು ಸಾಮಾನ್ಯ ಜನರಿಗೆ ಹೊರೆಯಾವುದಿಲ್ಲ ಎಂದಿದ್ದರು.
ಇದೀಗ ಯು-ಟರ್ನ್ ಹೊಡೆದಿರುವ ಸಿದ್ದರಾಮಯ್ಯ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅನ್ನಭಾಗ್ಯದ ಅಕ್ಕಿ ಕಡಿತಕ್ಕೂ ವಿರೋಧ ವ್ಯಕ್ತಪಡಿಸಿದ್ದಾರೆ.
ಇಂದು ನಗರದ ಅರಮನೆ ಮೈದಾನದಲ್ಲಿ ನಡೆದ ನೂತನ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಮಾಜಿ ಸಿಎಂ, ಕುಮಾರಸ್ವಾಮಿ ಅವರು ಅನ್ನಭಾಗ್ಯ ಯೋಜನೆಯ ಅಕ್ಕಿ ಕಡಿತ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ ಹಲವು ಜನಪರ ಯೋಜನೆಗಳ ಪರಿಣಾಮ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿತ್ತು. ಆದರೆ ಬಿಜೆಪಿ ಮತ್ತು ಸಂಘ ಪರಿವಾರ ಮಾಡಿದ ಅಪಪ್ರಚಾರ ಮತ್ತು ಸಂಚಿನಿಂದ ಅಧಿಕಾರ ಕಳೆದುಕೊಳ್ಳುವಂತಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಲೋಕಸಭೆ ಚುನಾವಣೆಯಲ್ಲಿ ನೀಡಿದ್ದ ಯಾವುದೇ ಒಂದು ಭರವಸೆಯನ್ನು ಈಡೇರಿಸಿಲ್ಲ. ಬರಿ ಸುಳ್ಳುಗಳ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಿಎಂ ವಾಗ್ದಾಳಿ ನಡೆಸಿದರು.
ಸಿಎಂ ಕುಮಾರಸ್ವಾಮಿ ಅವರು ಬಜೆಟ್ ನಲ್ಲಿ ಅನ್ನಭಾಗ್ಯದ ಅಕ್ಕಿಯನ್ನು 7 ಕೆಜಿಯಿಂದ 5 ಕೆಜಿಗೆ ಇಳಿಕೆ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com