ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್ ಆರ್ ಪಾಟೀಲ್ ರಾಜೀನಾಮೆ

ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಎಸ್ ಆರ್ ಪಾಟೀಲ್ ಕೆಪಿಸಿಸಿ ...
ಎಸ್ ಆರ್ ಪಾಟೀಲ್
ಎಸ್ ಆರ್ ಪಾಟೀಲ್

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಎಸ್ ಆರ್ ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು, ಇತ್ತೀಚೆಗೆ ಮುಗಿದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿರೀಕ್ಷಿತ ಸಾಧನೆ ಮಾಡಲಿಲ್ಲ ಇದರಿಂದ ನೈತಿಕ ಹೊಣೆ ಹೊತ್ತು ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮೇ 25ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದು ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಪಕ್ಷದ ಉತ್ತರ ಕರ್ನಾಟಕದ ಉಸ್ತುವಾರಿಯನ್ನು ವಹಿಸಿಕೊಂಡಿದ್ದೆ. ಅಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತಿದ್ದರೆ ನಾವು ಸ್ವಂತ ಬಲದಿಂದ ಸರ್ಕಾರ ರಚಿಸಬಹುದಾಗಿತ್ತು. ಚುನಾವಣೆಯಲ್ಲಿ ಸೋತಿದ್ದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಕಳೆದ 25ರಂದೇ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದರೂ ಕೂಡ ಈಗ ಕಾಂಗ್ರೆಸ್ ಜೆಡಿಎಸ್ ಮಧ್ಯೆ ಸಚಿವ ಖಾತೆ ಹಂಚಿಕೆ ಸಂದರ್ಭದಲ್ಲಿ ಭಿನ್ನಾಭಿಪ್ರಾಯ ಕಂಡುಬರುತ್ತಿರುವಾಗ ಬೆಳಕಿಗೆ ಬಂದಿದೆ.

ಇದೇ ಸಂದರ್ಭದಲ್ಲಿ ಎಸ್ ಆರ್ ಪಾಟೀಲ್ ನಾನು ಯಾವುದೇ ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿಲ್ಲ. ಪಕ್ಷ ನನಗೆ ಜವಾಬ್ದಾರಿ ನೀಡದರೆ ವಹಿಸಿಕೊಳ್ಳುತ್ತೇನೆ. ಆದರೆ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದು ಹೇಳಿದ್ದಾರೆ. ಪಕ್ಷಕ್ಕಾಗಿ ಯಾವುದೇ ಹುದ್ದೆ ನೀಡದಿದ್ದರೂ ಕೆಲಸ ಮಾಡಲು ಖುಷಿಯಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಬೆಳಗಾವಿಯಲ್ಲಿ ಕೇವಲ 8 ಸ್ಥಾನಗಳು, ಬಾಗಲಕೋಟೆಯಲ್ಲಿ 2, ವಿಜಯಪುರದಲ್ಲಿ 3, ಬೀದರ್ ನಲ್ಲಿ 4, ರಾಯಚೂರಿನಲ್ಲಿ 3, ಕೊಪ್ಪಳದಲ್ಲಿ 2, ಗದಗದಲ್ಲಿ 1, ಧಾರವಾಡದಲ್ಲಿ 2, ಯಾದಗಿರಿಯಲ್ಲಿ 1 ಮತ್ತು ಕಲಬುರಗಿಯಲ್ಲಿ 5 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿದೆ.

ಕಾಂಗ್ರೆಸ್ ಹೈಕಮಾಂಡ್ ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com