ಜೆಡಿಎಸ್ ಗೆ ನೂತನ ರಾಜ್ಯಾಧ್ಯಕ್ಷರ ನೇಮಕ?: ಹೆಚ್ ಡಿ ದೇವೇಗೌಡ ಸುಳಿವು

ಪ್ರಸ್ತುತ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ...
ಹೆಚ್ ಡಿ ದೇವೇಗೌಡ
ಹೆಚ್ ಡಿ ದೇವೇಗೌಡ

ಬೆಂಗಳೂರು: ಪ್ರಸ್ತುತ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಮೇಲಿನ ಜವಾಬ್ದಾರಿ ಮತ್ತು ಒತ್ತಡವನ್ನು ಕಡಿಮೆ ಮಾಡಲು ಜೆಡಿಎಸ್ ಅಧ್ಯಕ್ಷರಾಗಿ ಬೇರೆಯವರನ್ನು ನೇಮಕ ಮಾಡಲು ಪಕ್ಷ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದೆ.

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿರುವುದರಿಂದ ಮತ್ತು ಇತರ ಕೆಲವು ಖಾತೆಗಳು ಇಟ್ಟುಕೊಂಡಿರುವುದರಿಂದ ತುಂಬಾ ಜವಾಬ್ದಾರಿ ಹಾಗೂ ಒತ್ತಡದ ಕೆಲಸಗಳಿವೆ. ಅವರಿಗೆ ಆರೋಗ್ಯ ಸಮಸ್ಯೆಗಳು ಕೂಡ ಇವೆ. ಈ ಹಿನ್ನಲೆಯಲ್ಲಿ ಅವರ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಬೇರೆಯವರಿಗೆ ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡುವುದರ ಕುರಿತು ಜೆಡಿಎಸ್ ವರಿಷ್ಠ ದೇವೇಗೌಡರು ಇತರ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಎಷ್ಟು ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಅಥವಾ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲಿದೆಯೇ ಎಂಬ ಬಗ್ಗೆ ಮಾತುಕತೆಗಳು ನಡೆದಿಲ್ಲ. ಪ್ರಸ್ತುತ ಪುರಸಭೆ, ನಗರಸಭೆ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಪಕ್ಷವನ್ನು ಬಲಪಡಿಸುವುದು ನಮ್ಮ ಮೂಲ ಉದ್ದೇಶವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಕ್ಷೇತ್ರಗಳಲ್ಲಿ ಪಕ್ಷವನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ.

ಹಾಸನ ಕ್ಷೇತ್ರವನ್ನು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮುಂದಿನ ವರ್ಷ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳಿಗೆ ಉತ್ತರಿಸಿದ ದೇವೇಗೌಡರು, ಈ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com