

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿದೆ. ಸುಗಮವಾಗಿ ಆಡಳಿತ ನಡೆಯುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಕಾಂಗ್ರೆಸ್ ನ ಪ್ರಭಾವಿ ನಾಯಕ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಕೆಲವರು ಭಿನ್ನಾಭಿಪ್ರಾಯ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾವು ರಾಜ್ಯದ ಜನತೆಯ ಹಿತಾಸಕ್ತಿ ಮತ್ತು ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಲಿದ್ದೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮಧ್ಯೆ ಯಾವುದೇ ಭಿನ್ನಮತವಿಲ್ಲ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯೆ ಯಾವುದೇ ಕಲಹ, ಭಿನ್ನಾಭಿಪ್ರಾಯಗಳಿಲ್ಲ. ಸರ್ಕಾರ ಸುಗಮವಾಗಿ ಆಡಳಿತ ನಡೆಸುತ್ತಿದೆ ಎಂದರು.