ಬಿಬಿಎಂಪಿಯಲ್ಲಿ ಕಾಂಗ್ರೆಸ್ ಗೆ ನೀಡಿದ್ದ ಬೆಂಬಲ ಹಿಂಪಡೆಯುವ ಸುಳಿವು ನೀಡಿದ ದೇವೇಗೌಡರು

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿರುವ....
ಎಚ್ ಡಿ ದೇವೇಗೌಡ
ಎಚ್ ಡಿ ದೇವೇಗೌಡ
ನವದೆಹಲಿ: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿ ಮುರಿದುಕೊಳ್ಳಲು ಮುಂದಾಗಿದೆ.
ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು, ಬೆಂಗಳೂರಿಗೆ ತೆರಳಿದ ಬಳಿಕ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಬಿಬಿಎಂಪಿಯಲ್ಲಿ ಕಾಂಗ್ರೆಸ್ ನೀಡಿದ್ದ ಬೆಂಬಲ ಹಿಂಪಡೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮಾರ್ಚ್ 23ರಂದು ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸದಂತೆ ಮತ್ತು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಜೆಡಿಎಸ್ ಮುಖಂಡರು ಕಾಂಗ್ರೆಸ್ ಗೆ ಮನವಿ ಮಾಡಿಕೊಂಡಿತ್ತು. ಆದರೂ ಕಾಂಗ್ರೆಸ್ ಮೂರನೇ ಅಭ್ಯರ್ಥಿ ಕಣಕ್ಕಿಳಿಸುವ ಚಿಂತನೆ ನಡೆಸಿದ್ದು, ಇದರಿಂದ ಆಕ್ರೋಶಗೊಂಡ ದೇವೇಗೌಡರು, ಬಿಬಿಎಂಪಿಯಲ್ಲಿ ಮೈತ್ರಿ ಮುರಿದುಕೊಳ್ಳುವ ಬೆದರಿಕೆ ಹಾಕಿದ್ದಾರೆ.
ಒಂದು ರಾಜ್ಯಸಭಾ ಸ್ಥಾನವನ್ನು ಜೆಡಿಎಸ್ಸಿಗೆ ಬಿಟ್ಟುಕೊಡದಿದ್ದರೆ ಕಾಂಗ್ರೆಸ್ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಇತ್ತೀಚೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಯಾದಗಿರಿಯಲ್ಲಿ ಎಚ್ಚರಿಕೆ ನೀಡಿದ್ದರು.
ರಾಜ್ಯಸಭೆಯ ಒಂದು ಸ್ಥಾನವನ್ನು ತನಗೆ ಬಿಟ್ಟುಕೊಡಬೇಕು. ಇಲ್ಲದಿದ್ದರೆ ಬಿಬಿಎಂಪಿಯಲ್ಲಿ ನೀಡಿರುವ ಬೆಂಬಲ ಹಿಂತೆಗೆದುಕೊಳ್ಳುವುದಾಗಿ ಜೆಡಿಎಸ್‌ ಪಟ್ಟು ಹಿಡಿದಿರುವುದು ಕಾಂಗ್ರೆಸ್‌ಗೆ ತಲೆನೋವಾಗಿದೆ. ಕಾಂಗ್ರೆಸ್‌ ತನ್ನ ಶಾಸಕ ಬಲದ ಆಧಾರದಲ್ಲಿ ಎರಡು ಸ್ಥಾನಗಳನ್ನು ನಿರಾಯಾಸವಾಗಿ ಗೆಲ್ಲಲಿದೆ. ಇನ್ನೊಂದು ಸ್ಥಾನಕ್ಕೆ ಕೆಲವು ಮತಗಳ ಕೊರತೆ ಆಗಲಿದೆ. ಆ ಸ್ಥಾನ ತನಗೆ ಬಿಟ್ಟು ಕೊಡುವಂತೆ ಜೆಡಿಎಸ್‌ ನಾಯಕರು ಒತ್ತಡ ಹೇರುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com