ಲಿಂಗಾಯತ ವಿವಾದ: ಬಿಎಸ್'ವೈ ಸಿಎಂ ಆಗುವುದನ್ನು ತಪ್ಪಿಸಲು ಸಿದ್ದು ತಂತ್ರ- ಅಮಿತ್ ಶಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಡೆದಾಳುವ ನೀತಿಯನ್ನು ಅನುಸರಿಸುತ್ತಿದ್ದು, ಲಿಂಗಾಯತರಿಗೆ ಅಲ್ಪಸಂಖ್ಯಾತರ ಸ್ಥಾನ ನೀಡುವ ಮೂಲಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ಯತ್ನ ನಡೆಸುತ್ತಿದ್ದಾರೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್...
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಅಮಿತ್ ಶಾ
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಅಮಿತ್ ಶಾ
Updated on: 
ತೀರ್ಥಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಡೆದಾಳುವ ನೀತಿಯನ್ನು ಅನುಸರಿಸುತ್ತಿದ್ದು, ಲಿಂಗಾಯತರಿಗೆ ಅಲ್ಪಸಂಖ್ಯಾತರ ಸ್ಥಾನ ನೀಡುವ ಮೂಲಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ಯತ್ನ ನಡೆಸುತ್ತಿದ್ದಾರೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ. 
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ತಿಪಟೂರಿನಲ್ಲಿ ತೆಂಗು ಬೆಳೆಗಾರರ ಸಮಾವೇಶ ಹಾಗೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಅಡಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲಂಗಾಯತ ಮೇಲಿನ ಪ್ರೀತಿಯಿಂದ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ಸ್ಥಾನ ನೀಡುವ ನಿರ್ಧಾರಕ್ಕೆ ಬಂದಿಲ್ಲ. ಆದರೆ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ನಿರ್ಧಾರ ಕೈಗೊಂಡಿದ್ದಾರೆಂದು ಹೇಳಿದ್ದಾರೆ. 
ರಾಜ್ಯದಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬಂದಿದ್ದೇ ಆದರೆ, ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಈ ಮೂಲಕ ಕರ್ನಾಟಕದ ಜನತೆಗೆ ಸ್ಪಷ್ಟಪಡಿಸುತ್ತೇನೆಂದು ತಿಳಿಸಿದ್ದಾರೆ. 
ಲಿಂಗಾಯತ ಹಾಗೂ ವೀರಶೈವ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನ ನೀಡಲು ಕೆಲ ದಿನಗಳ ಹಿಂದಷ್ಟೇ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಇದರಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಿತ್ತು. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಶಾ ಅವರು, 2013ರಲ್ಲಿ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದ್ದ ಮನಮೋಹನ್ ಸಿಂಗ್ ಸರ್ಕಾರ ಅಂದು ಜನರಲ್ಲಿ ಗೊಂದಲ ಸೃಷ್ಟಿಸುವ ಸಲುವಾಗಿ ಈ ಶಿಫಾರಸ್ಸನ್ನು ತಿರಸ್ಕರಿಸಿತ್ತು. ಸಿದ್ದರಾಮಯ್ಯ ಅವರ ಒಡಕು ರಾಜಕೀಯಗಳಿಗೆ ರಾಜ್ಯದ ಜನತೆ ಆಕರ್ಷಿತರಾಗುವುದಿಲ್ಲ. ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುವುದಕ್ಕೂ ಮುನ್ನ ಒಡಕು ರಾಜಕೀಯ ಮಾಡುತ್ತಿರುವ ಸಿದ್ದರಾಮಯ್ಯ ಅವರತ್ತ ಬೆರಳು ತೋರಬೇಕು ಎಂದಿದ್ದಾರೆ. 
ಅಲ್ಲದೆ, ಸಿದ್ದರಾಮಯ್ಯ ಅವರ ಸರ್ಕಾರವನ್ನು ಬ್ರಿಟೀಷರ ಸರ್ಕಾರಕ್ಕೆ ಹೋಲಿಕೆ ಮಾಡಿರುವ ಅಮಿತ್ ಶಾ ಅವರು, ಕಾಂಗ್ರೆಸ್ ಅವರ ಹಡಗು ಸಂಕಷ್ಟದಲ್ಲಿ ಸಿಲುಕಿಕೊಂಡಿದೆ. ಹೀಗಾಗಿ ಏನು ಮಾಡಬೇಕೆಂದು ತನ್ನ ಕೊನೆಯ ಯತ್ನಗಳನ್ನು ನಡೆಸುತ್ತಿದೆ. ಹೀಗಾಗಿ ಜನರನ್ನು ಒಡೆಯಲು ಶ್ರಮ ಪಡುತ್ತಿದೆ. ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನ ನೀಡಲೇಬೇಕೆಂದಿದ್ದರೆ, ಈ ಹಿಂದೆಯೇ ಏಕೆ ಪ್ರಸ್ತಾಪ ಮಾಡಲಿಲ್ಲ? ಈ ಹಿಂದೆ ಮತಗಳನ್ನು ಪಡೆಯಬೇಕೆಂದ ಯಾವುದೇ ಅಗತ್ಯವಿರಲಿಲ್ಲ ಎಂದು ತಿಳಿಸಿದ್ದಾರೆ. 
ಬಳಿಕ ರೈತರ ಆತ್ಮಹತ್ಯೆ ತಡೆಯಲು ಸಿದ್ದು ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 5 ವರ್ಷಗಳ ಆಡಳಿತದಲ್ಲಿ 3,781 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಆತ್ಮಹತ್ಯೆಗಳಿಗೆ ಯಾರು ಜವಾಬ್ದಾರರು?... ಕಾಂಗ್ರೆಸ್ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲೂ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚು. ಆದರೆ, ಬಿಜೆಪಿ ಆಡಳಿತ ನಡೆಸುತ್ತಿರುವ ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ಇದರ ಕುಸಿದಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲು ಮತ ಹಾಕಿದ್ದೇ ಆದರೆ, ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತದೆ ಎಂದು ನಾನು ಭರವಸೆ ನೀಡುತ್ತೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com