ಹೆಬ್ಬಾಳದಲ್ಲಿ ಕೃಷ್ಣಾ ಪ್ರಚಾರ
ರಾಜಕೀಯ
ಸಿದ್ದು ಸರ್ಕಾರ ಕಿತ್ತೊಗೆಯುವಂತೆ ಮತದಾರರಿಗೆ ಎಸ್ಎಂಕೆ ಕರೆ!
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವಂತೆ ಮಾಜಿ ಸಿಎಂ ಎಸ್ ಎಂ ಕೃಷ್ಣಾ ಮತದಾರರಿಗೆ ಕರೆ ನೀಡಿದ್ದಾರೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವಂತೆ ಮಾಜಿ ಸಿಎಂ ಎಸ್ ಎಂ ಕೃಷ್ಣಾ ಮತದಾರರಿಗೆ ಕರೆ ನೀಡಿದ್ದಾರೆ.
ಭಾನುವಾರ ಹೆಬ್ಬಾಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಅವರ ಪರ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಪ್ರಚಾರ ನಡೆಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಎಸ್ ಎಂ ಕೃಷ್ಣಾ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ದಿವ್ಯ ನಿದ್ರೆಯಲ್ಲಿದೆ. ಜನತೆಯ ಆಶೋತ್ತರಗಳನ್ನು ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ರಾಜ್ಯಜದಲ್ಲಿ ಬದಲಾವಣೆಯ ಸಮಯ ಬಂದಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕೃಷ್ಣಾ ಹೇಳಿದರು.
ಅಂತೆಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವೈಖರಿಯನ್ನು ಶ್ಲಾಘಿಸಿದ ಕೃಷ್ಣ, ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡುತ್ತಿದೆ. ಸರ್ಕಾರ ಅಧಿಕಾರಕ್ಕೆ ಬಂದು 4 ವರ್ಷಗಳು ಕಳೆದರೂ ಒಂದೇ ಒಂದು ಭ್ರಷ್ಟಾಚಾರ ಆರೋಪ ಕೇಳಿ ಬಂದಿಲ್ಲ. ಅಭಿವೃದ್ಧಿ ಕಾರ್ಯದಲ್ಲಿ ಮೋದಿ ಸರ್ಕಾರ ಹೊಸ ದಾಖಲೆ ನಿರ್ಮಾಣ ಮಾಡಿದೆ ಎಂದು ಎಸ್ ಎಂಕೆ ಶ್ಲಾಘಿಸಿದರು.
ಇನ್ನು ಹೆಬ್ಬಾಳ, ಕುಂತಿ ಗ್ರಾಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೃಷ್ಣ ಅವರು ಮಿಂಚಿನ ಪ್ರಚಾರ ಕೈಗೊಂಡರು. ಒಂದು ಗಂಟೆಗೂ ಹೆಚ್ಚಿನ ಸಮಯದವರೆಗೆ ಪ್ರಚಾರದಲ್ಲಿ ಪಾಲ್ಗೊಂಡು ಅವರು ನಾರಾಯಣಸ್ವಾಮಿಗೆ ಮತ ಹಾಕಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಕೃಷ್ಣ ಅವರ ಆಗಮನದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಜನ ಕೂಡ ರಸ್ತೆಯಲ್ಲಿ ನಿಂತು ಮಾಜಿ ಸಿಎಂರತ್ತ ಕೈ ಬೀಸಿ ಬೆಂಬಲ ವ್ಯಕ್ತಪಡಿಸಿದರು. ಈ ಬಾರಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸರಕಾರ ಸ್ಥಾಪನೆಗೆ ಅವಕಾಶ ನೀಡುವಂತೆ ಕೋರಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ