

ಬೆಂಗಳೂರು : ಸರ್ಕಾರ ರಚನೆ ನಿಟ್ಟಿನಲ್ಲಿ ಕಾಂಗ್ರೆಸ್ -ಜೆಡಿಎಸ್ ನಡುವಿನ ಮೈತ್ರಿಯಲ್ಲಿ ಯಾವುದೇ ಅನುಮಾನವಿಲ್ಲಾ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಸ್ಪಷ್ಪಪಡಿಸಿದ್ದಾರೆ.
ಜೆಡಿಎಸ್ ಶಾಸಕಾಂಗ ಸಭೆ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಜೊತೆ ಹೋಗಲು ಈಗಾಗಲೇ ನಿರ್ಧರಿಸಲಾಗಿದೆ. ಬೇರೆ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಬಿಜೆಪಿ ನಾಯಕರು ನಮ್ಮ ಪಕ್ಷದ ನಾಯಕರಿಗೆ ಪೋನ್ ಕರೆ ಮಾಡುತ್ತಿದ್ದಾರೆ. ಆದರೆ, ಏನು ಆಮಿಷವೊಡ್ಡಲಾಗುತ್ತಿದೆ ಎಂಬ ಬಗ್ಗೆ ಗೊತ್ತಿಲ್ಲ. ಈ ಬಗ್ಗೆ ನಮ್ಮ ಪಕ್ಷದ ಸದಸ್ಯರು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಎಲ್ಲರೂ ಜೊತೆಯಲ್ಲಿಯೇ ಇದ್ದು, ಪಕ್ಷದ ನಿರ್ಧಾರಕ್ಕೆ ಬದ್ದವಾಗಿರುವುದಾಗಿ ಜೆಡಿಎಸ್ ಮುಖಂಡ ಶರವಣ ತಿಳಿಸಿದರು.
ಕಾಂಗ್ರೆಸ್ ಜೆಡಿಎಸ್ ಗೆ ಬೆಂಬಲ ಘೋಷಿಸಿರುವುದರಿಂದ ಒಟ್ಟು ಸದಸ್ಯರ ಸಂಖ್ಯೆ 117 ಆಗಿದ್ದು, ರಾಜ್ಯಪಾಲರ ಮುಂದೆ ಸರ್ಕಾರ ರಚನೆಯ ಹಕ್ಕು ಮಂಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಆದಾಗ್ಯೂ, ಜೆಡಿಎಸ್ ಪಕ್ಷದ ರಾಜ ವೆಂಕಟಪ್ಪ ನಾಯಕ್ ಮತ್ತು ವೆಂಕಟ ರಾವ್ ನಾಡಗೌಡ ಅವರು ಶಾಸಕಾಂಗ ಸಭೆಯಿಂದ ದೂರ ಉಳಿದದ್ದು, ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.