

ನವದೆಹಲಿ : ಎಲ್ಲಾ ಅಡೆತಡೆಗಳನ್ನು ಮೀರಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಭಾರತೀಯ ಸಂವಿಧಾನವನ್ನು ಅಪಹಾಸ್ಯ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಪ್ರಜಾಪ್ರಭುತ್ವದ ಸೋಲಿಗೆ ದೇಶ ಇಂದು ದು:ಖಿಸುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟರ್ ನಲ್ಲಿ ಹೇಳಿದ್ದಾರೆ.
ಸರ್ಕಾರ ರಚನೆಗೆ ಅಗತ್ಯವಿರುವ ಸರಳ ಬಹುಮತ ಇಲ್ಲದಿದಿದರೂ ಇಂದು ಬೆಳಿಗ್ಗೆ ಬಿಜೆಪಿ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ಮಾಡಿಕೊಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೂಲೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ರಚನೆಗೆ ಅವಕಾಶ ನೀಡದ ರಾಜ್ಯಪಾಲರ ಕ್ರಮವನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದು, ಅಸಂವಿಧಾನಿಕವಾಗಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಲಾಗಿದೆ ಎಂದು ಟೀಕಿಸಿದ್ದಾರೆ.