

ಬೆಂಗಳೂರು: ಪ್ರತಿಭಟನೆ ನಡೆಸಲು ಕಾಂಗ್ರೆಸ್ ಬಯಸಿದರೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಯ್ಯ ವಿರುದ್ಧ ಮಾಡಲಿ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಗುರುವಾರ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷವನ್ನು ನಾಶ ಮಾಡಿದ್ದು, ಸೋನಿಯಾ, ರಾಹುಲ್ ಹಾಗೂ ಸಿದ್ದರಾಮಯ್ಯ. ಕಾಂಗ್ರೆಸ್ ಪ್ರತಿಭಟನೆ ನಡೆಸುವುದೇ ಆದರೆ, ಅವರ ವಿರುದ್ಧ ನಡೆಸಲಿ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿಗೆ ಸರ್ಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಿದ್ದು ರಾಜ್ಯಪಾಲರು. ಹಿಂದಿನ ನಿದರ್ಶನಗಳನ್ನು ತೆಗೆದುಕೊಂಡು ಅವರು ಈ ನಿರ್ಧಾರ ಮಾಡಿರಬಹುದು ಎಂದರು.
ನಮಗೆ ಬೆಂಬಲ ಸಿಗುತ್ತದೆ ಎಂಬ ವಿಶ್ವಾಸವಿದೆ. ಸದನದಲ್ಲಿ ನಮ್ಮ ಬಹುಮತವನ್ನು ಸಾಬೀತುಪಡಿಸಿ 5 ವರ್ಷಗಳ ಕಾಲ ಸುಭದ್ರ ಸರ್ಕಾರ ನೀಡಲಿದ್ದೇವೆ ಎಂದು ನುಡಿದರು.