ನವದೆಹಲಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ರಸ್ತೆ ಸಾರಿಗೆ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ, ಕೊಡಗಿನ ಪ್ರವಾಹ ಪರಿಸ್ಥಿತಿ ಕುರಿತು ಮತ್ತು ಮೇಕೆದಾಟು ಯೋಚನೆ ಕುರಿತು ಚರ್ಚೆ ನಡೆಸಿದರು.
ಮಳೆಯಿಂದಾಗಿ ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮನೆ, ರಸ್ತೆಗಳಿಗೆ ಹೆಚ್ಚು ಹಾನಿಯಾಗಿದ್ದು, ಪರಿಹಾರ ಕಾರ್ಯಕ್ಕೆ ಹಣ ನೀಡುವಂತೆ ರಾಜನಾಥ್ ಸಿಂಗ್ ಅವರಿಗೆ ಸಿಎಂ ಮನವಿ ಮಾಡಿದರು.
ಬಳಿಕ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು, ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡುವಂತೆ ಕೇಳಿಕೊಂಡರು.
ಕೇಂದ್ರ ಸಚಿವರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಋಣ ಮುಕ್ತ ಕಾಯ್ದೆ ವಿಚಾರವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಜೊತೆ ಚರ್ಚಿಸಿದ್ದು, ಕಾನೂನು ಇಲಾಖೆ ಸ್ಪಷ್ಟೀಕರಣ ಕೇಳಿತ್ತು, ಅದನ್ನು ಈಗ ನೀಡಲಾಗಿದೆ. ಹಿಂದೆ ರಾಷ್ಟ್ರಪತಿಗಳ ಜೊತೆಗೂ ಈ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಸ್ಯೆ ಎದುರಾಗಿದೆ. ನೆರೆ-ಬರದ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿಗೆ ಅವಕಾಶ ಕೇಳಲಾಗಿತ್ತು. ಪ್ರಧಾನಿ ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿರುವ ಹಿನ್ನೆಲೆಯಲ್ಲಿ ಗೃಹ ಸಚಿವರನ್ನು ಭೇಟಿ ಮಾಡುವಂತೆ ತಿಳಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ರಾಜನಾಥ್ ಸಿಂಗ್ ಭೇಟಿ ಮಾಡಿ ರಾಜ್ಯಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಚರ್ಚಿಸಿದ್ದೇವೆ ಎಂದರು.
ಇನ್ನು ರಾಷ್ಟ್ರೀಯ ಹೆದ್ದಾರಿಗಳ ದುರಸ್ತಿಗೆ ಪರಿಹಾರ ಕೇಳಿದ್ದೇನೆ. ಮೇಕೆದಾಟು ಯೋಜನೆಗೆ ನಿತಿನ್ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಗಡ್ಕರಿ ಸೂಚನೆ ನೀಡಿದ್ದಾರೆ. ಇದರ ಜೊತೆಗೆ ಅರಣ್ಯ ಮತ್ತು ಪರಿಸರ ಇಲಾಖೆ ಪರವಾನಗಿ ಪಡೆಯಬೇಕಿದೆ. ಈ ಬಾರಿ 200 ಟಿಎಂಸಿ ನೀರು ಸಮುದ್ರಕ್ಕೆ ವ್ಯರ್ಥವಾಗಿ ಹರಿದಿದೆ. ಈ ನೀರು ಬರಗಾಲದ ಸಂದರ್ಭದಲ್ಲಿ ಬಳಕೆಗೆ ಅನುಕೂಲವಾಗಲಿದೆ. ವಾಸ್ತವಾಂಶಗಳನ್ನು ಸಚಿವರ ಗಮನಕ್ಕೆ ತಂದಿದ್ದು, ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.
ಈ ವೇಳೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗವಡ, ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು.