ಅನಿತಾ ಕುಮಾರಸ್ವಾಮಿ
ರಾಜಕೀಯ
ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ, ಆದರೆ ಅನಿತಾ ಪರ ಮಾತ್ರ ಪ್ರಚಾರ ಮಾಡುವುದಿಲ್ಲ: ರಾಮನಗರ 'ಕೈ' ಮುಖಂಡರು
ಅಕ್ಟೋಬರ್ 14 ರಂದು ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಯದಿದ್ದರೇ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪರ ಪ್ರಚಾರ ಬಹಿಷ್ಕರಿಸಿ, ಸ್ವತಂತ್ರ್ಯ ಅಭ್ಯರ್ಥಿಯನ್ನು ....
ರಾಮನಗರ: ಅಕ್ಟೋಬರ್ 14 ರಂದು ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಯದಿದ್ದರೇ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪರ ಪ್ರಚಾರ ಬಹಿಷ್ಕರಿಸಿ, ಸ್ವತಂತ್ರ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ರಾಮನಗರ ಬಂಡಾಯ ಕಾಂಗ್ರೆಸ್ ನಾಯಕರು ಬೆದರಿಕೆ ಹಾಕಿದ್ದಾರೆ.
ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ರಾಮನಗರದಲ್ಲಿ ಮತ್ತು ಮಂಡ್ಯದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿರುವುದು ಜಿಲ್ಲಾ ಕಾಂಗ್ರೆಸ್ ನಾಯಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಗುರುವಾರ ಪಕ್ಷದ ಕಾರ್ಯಕರ್ತರ ಜೊತೆಗೆ ಕಾಂಗ್ರೆಸ್ ಎಂಎಲ್ ಸಿ.ಎಂ ಲಿಂಗಪ್ಪ ಸಭೆ ನಡೆಸಿ ರಾಮನಗರದಿಂದ ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಸುವಂತೆ ಒತ್ತಾಯಿಸಿದ್ದಾರೆ. ನಾವು ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ದರಿದ್ದೇವೆ, ಆದರೆ ಜೆಡಿಎಸ್ ಅಭ್ಯರ್ಥಿ ಪರ ಮಾತ್ರ ಪ್ರಚಾರ ಮಾಡುವುದಿಲ್ಲ, ರಾಮನಗರದಲ್ಲಿ ಕಾಂಗ್ರೆಸ್ ಭದ್ರವಾಗಿದೆ, ಪಕ್ಷದ ಅಭ್ಯರ್ಥಿ ಗೆಲ್ಲುವ ಅವಕಾಶಗಳು ಹೆಚ್ಚಿವೆ,ಇದು ಪಕ್ಷದ ಕಾರ್ಯಕರ್ತರ ಅಭಿಪ್ರಾಯ. ಕಾರ್ಯಕರ್ತರ ಭಾವನೆಗಳನ್ನು ನಾಯಕರು ಅರ್ಥ ಮಾಡಿಕೊಳ್ಳದಿದ್ದರೇ ಮುಂದೆ ಏನು ಎಂಬ ಬಗ್ಗೆ ನಾವು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಲಿಂಗಪ್ಪ ಹೇಳಿದ್ದಾರೆ.
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಕುಮಾರ ಸ್ವಾಮಿ ವಿರುದ್ಧ ಸ್ಪರ್ಧಿಸಿದ್ದ ಇಕ್ಬಾಲ್ ಹುಸೇನ್ ಕೂಡ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬೆದರಿಕೆ ಒಡ್ಡಿದ್ದಾರೆ, ಪಕ್ಷದ ಕಾರ್ಯಕರ್ತರ ಅಭಿಪ್ರಾಯಗಳನ್ನು ನಾನು ನಿರ್ಲಕ್ಷ್ಯಿಸುವುದಿಲ್ಲ, ನಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದಿದ್ದರೇ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ರಾಮನಗರದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಜಿಲ್ಲಾಧ್ಯಕ್ಷ ಗಂಗಾಧರ್ ಅವರಿಗೆ ಘೇರಾವ್ ಹಾಕಿದ್ದಾರೆ, ಕಾಂಗ್ರೆಸ್ ಜೆಡಿಎಸ್ ಮೈತ್ರಿ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಕಚೇರಿಯ ಪಿಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ.

