ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾವು ಏರತೊಡಗಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಕಣಕ್ಕೆ ಇಳಿಯುತ್ತಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಹಾಗೂ ಮಾಜಿ ಸಂಸದ ಬಿ.ವೈ.ರಾಘವೇಂದ್ರ, ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಹಾಗೂ ಜೆಡಿಯು ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ಅವರ ಪುತ್ರ ಮಹಿಮಾ ಪಟೇಲ್ ಅವರು ಕಣಕ್ಕೆ ಇಳಿಯುತ್ತಿದ್ದಾರೆ.
ಮನಸ್ತಾಪಗಳನ್ನು ಬದಿಗೊತ್ತಿ ಪಕ್ಷಕ್ಕಾಗಿ ದುಡಿಯಲು ನಿರ್ಧರಿಸಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು, ಜಂಟಿಯಾಗಿ ಮಧು ಬಂಗಾರಪ್ಪ ಅವರನ್ನು ಅಂತಿಮವಾಗಿ ಶಿವಮೊಗ್ಗ ಕ್ಷೇತ್ರದಲ್ಲಿ ನಿಲ್ಲಿಸಿದೆ. ಈ ಮಧ್ಯೆ ಸ್ವಕ್ಷೇತ್ರ ಶಿವಮೊಗ್ಗದಲ್ಲಿ ಯಡಿಯೂರಪ್ಪ ಅವರು ಪುತ್ರನನ್ನು ಕಣಕ್ಕೆ ಇಳಿಸಿದ್ದು, ಚುನಾವಣೆ ಇದೀಗ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಮುಖ್ಯಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಅವರೊಂದಿಗೆ ಕೂಡಿ ಕಾಂಗ್ರೆಸ್ ಬಲಿಷ್ಠ ನಾಯಕ ಡಿ.ಕೆ.ಶಿವಕುಮಾರ್ ಅವರು ಮಧು ಬಂಗಾರಪ್ಪ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ.
ಇವೆಲ್ಲದರ ನಡುವೆ ಮಧುಬಂಗಾರಪ್ಪ ಅವರು ನಟ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಅವರಂತಹ ಸ್ಟಾರ್ ಪ್ರಚಾರಕರ ಬೆಂಬಲವನ್ನು ಪಡೆದುಕೊಂಡಿದ್ದಾರೆ. ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಅವರು ಮಧು ಬಂಗಾರಪ್ಪ ಅವರ ಸಹೋದರಿಯಾಗಿದ್ದಾರೆ.
2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರು ಶಿವಮೊಗ್ಗ ಕ್ಷೇತ್ರದಲ್ಲಿ ಭಾರೀ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ಗೀತಾ ಶಿವರಾಜ್ ಕುಮಾರ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದೀಗ ಮಧು ಬಂಗಾರಪ್ಪ ಅವರು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಬೆಂಬಲದೊಂದಿಗೆ ಕಣಕ್ಕೆ ಇಳಿಯುತ್ತಿದ್ದಾರೆ.