ಶಿವಮೊಗ್ಗ: ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ದುರಾಸೆ ನನಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮತ್ತೊಮ್ಮೆ ಸಿಎಂ ಆಗುವ ದುರಾಸೆ ನನಗೆ ಇಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನ ಆಶೀರ್ವಾದ ಮಾಡಿದರೆ ನೋಡೋಣ ಎಂದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಸಿಎಂ, ಯಡಿಯೂರಪ್ಪ ಮತ್ತೆ ಸಿಎಂ ಆಗುತ್ತೇನೆ ಎನ್ನುವುದು ಕೇವಲ ಭ್ರಮೆ ಎಂದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಪವಿತ್ರ ಎಂದು ಹೇಳುತ್ತಾರೆ. ಆದರೆ, ಜೆಡಿಎಸ್ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿರಲಿಲ್ವಾ? ಬೇರೆ ಬೇರೆ ರಾಜ್ಯಗಳಲ್ಲೂ ಇತರೆ ಪಕ್ಷಗಳ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿಲ್ವಾ? ಇದು ಪವಿತ್ರ ಮೈತ್ರಿಯೋ ಎಂದು ಬಿಜೆಪಿಗೆ ಟಾಂಗ್ ನೀಡಿದರು.
ಮೈತ್ರಿ ಸರ್ಕಾರಕ್ಕೂ, ಉಪ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ. ಐದು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಈ ಸರ್ಕಾರ ಬೀಳುವುದಿಲ್ಲ. ಐದು ವರ್ಷ ಭದ್ರವಾಗಿರುತ್ತದೆ ಎಂದರು.