ಬೆಂಗಳೂರು: ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತ ಅಥವಾ ಅಸಮಾಧಾನ ಇಲ್ಲ. ಎಲ್ಲವೂ ಸರಿಯಾಗಿಯೇ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತ ಇಲ್ಲ. ಇದೆಲ್ಲಾ ಮಾಧ್ಯಮ ಸೃಷ್ಟಿ. ಸಚಿವ ಸ್ಥಾನ ಕೇಳಿದರೆ ಭಿನ್ನಮತ ಸ್ಫೋಟ ಅನ್ನುವುದು ಸರಿಯಲ್ಲ ಎಂದರು.
ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಕೆಲವರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವುದು ಸತ್ಯ. ಆದರೆ ಜಾರಕಿಹೊಳಿ ಸಹೋದರರು ಸೇರಿದಂತೆ ಯಾರೂ ಪಕ್ಷ ಬಿಡುವುದಿಲ್ಲ ಎಂದು ಮಾಜಿ ಸಿಎಂ ಸ್ಪಷ್ಟಪಡಿಸಿದರು.
ಇದೇ ವೇಳೆ ಪ್ರತಿ ಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಲಜ್ಜೆಗೆಟ್ಟ ಬಿಜೆಪಿ ಮಾನಾಮರ್ಯಾದೆ ಬಿಟ್ಟು ಅಧಿಕಾರ ದಾಹ ದಿಂದ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ ಎಂದು ಕಿಡಿ ಕಾರಿದರು.
ಕಾಂಗ್ರೆಸ್ ಪಕ್ಷದ ಹಲವರನ್ನು ಬಿಜೆಪಿ ಸಂಪರ್ಕಿಸಿರುವುದು ಬಹಿರಂಗವಾಗಿದೆ. ಬಿಜೆಪಿ ಸರ್ಕಾರ ಬೀಳಿಸಲು ಯತ್ನಿಸಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದರು.
ಬಿಜೆಪಿಯ ಆಪರೇಷನ್ ಕಮಲ ಯಶಸ್ವಿಯಾಗಲ್ಲ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ಮತ್ತು ಸರ್ಕಾರ ಸುಭದ್ರವಾಗಿದೆ ಎಂದು ಮಾಜಿ ಸಿಎಂ ಹೇಳಿದರು.