ಸೆ.25ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ

ಬೆಳಗಾವಿ ರಾಜಕೀಯ ಬಿಕ್ಕಟ್ಟಿನ ಬೆನ್ನಲ್ಲೇ ದೋಸ್ತಿ ಸರ್ಕಾರ ಅಲುಗಾಡುತ್ತಿದೆ ಎಂಬ ಮಾತುಗಳ ನಡುವೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಬೆಳಗಾವಿ ರಾಜಕೀಯ ಬಿಕ್ಕಟ್ಟಿನ ಬೆನ್ನಲ್ಲೇ ದೋಸ್ತಿ ಸರ್ಕಾರ ಅಲುಗಾಡುತ್ತಿದೆ ಎಂಬ ಮಾತುಗಳ ನಡುವೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಆಪರೇಷನ್ ಕಮಲದ ಭೀತಿಯಲ್ಲಿ ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಚರ್ಚೆ ಕಾವೇರುತ್ತಿರುವ ಬೆನ್ನಲ್ಲೇ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕಾಂಗ್ರೆಸ್​ ಮುಂದಾಗಿದ್ದು, ಇದೇ ಸೆಪ್ಟೆಂಬರ್​ 25 ರಂದು ಮಾಜಿ ಮುಖ್ಯಮಂತ್ರಿ ಮತ್ತು ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಮೂಲಗಳ ಪ್ರಕಾರ ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದ್ದು, ಶಾಸಕರನ್ನು ಪಕ್ಷದಲ್ಲಿಯೇ ಹಿಡಿದಿಟ್ಟುಕೊಳ್ಳುವ ಕುರಿತು ಸಿದ್ದರಾಮಯ್ಯ ಅವರು ಮಾಸ್ಟರ್ ​ಪ್ಲ್ಯಾನ್​ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ಇದೇ ಕಾರಣಕ್ಕೆ ನಿನ್ನೆ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದ್ದರು. ಅಂತೆಯೇ ಶುಕ್ರವಾರ ಮಧ್ಯಾಹ್ನ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಮುಖಂಡರು ಸಭೆ ನಡೆಸಿದರು. ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್ ಹಾಜರಿದ್ದು ವಿಚಾರ ವಿನಿಮಯ ಮಾಡಿಕೊಂಡರು.
ಈ ವೇಳೆ ಶಾಸಕಾಂಗ ಸಭೆ ಕರೆಯುವ ಕುರಿತು ನಿರ್ಧರಿಸಲಾಗಿದೆ. ಇದಕ್ಕೆ ಇಂಬು ನೀಡುವಂತೆ ಇಂದು ಜೆಡಿಎಸ್ ಪಕ್ಷ ಕೂಡ ಶಾಸಕಾಂಗ ಸಭೆ ಕರೆದಿದ್ದು, ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com